ಸಿಎಂ ಬೊಮಾಯಿಗೆ ಪತ್ರ ಬರೆದ ಮಾಜಿ ಮುಖ್ಯಮಂತ್ರಿ ಬಿಎಸ್ ವೈ
ಬೆಂಗಳೂರು: ಶಿವಮೊಗ್ಗ ವಿಮಾನಲ್ದಾಣಕ್ಕೆ ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಹೆಸರನ್ನು ಇಡಲು ರಾಜ್ಯ ಸರಕಾರ ನಿರ್ಧರಿಸಿತ್ತು, ಆದರೆ ಇದಕ್ಕೆ ಯಡಿಯೂರಪ್ಪ ಅವರು ವಿರೋಧ ವ್ಯಕ್ತಪಡಿಸಿದ್ದಾರೆ.
ಈ ಕುರಿತು ಸಿಎಂ ಬೊಮ್ಮಾಯಿ ಅವರಿಗೆ ಪತ್ರ ಬರೆದ ಅವರು ಶಿವಮೊಗ್ಗ ಜಿಲ್ಲೆಯ ಬಹುದಿನದ ಕನಸಾದ ವಿಮಾನ ನಿಲ್ದಾಣ ನನಸಾಗುತ್ತಿದೆ. ಸೋಗಾನೆಯಲ್ಲಿ ನೂತನವಾಗಿ ನಿರಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿಯನ್ನು ಶೀಘ್ರ ಪೂರ್ಣಗೊಳಿಸಲು ಅಗತ್ಯವಾದ ಅನುದಾನವನ್ನು ತ್ವರಿತವಾಗಿ ಬಿಡುಗಡೆ ಮಾಡುವುದಾಗಿ ತಿಳಿಸಿರುವುದಕ್ಕಾಗಿ ತಮಗೆ ಧನ್ಯವಾದಗಳು.
ಈ ಹೊಸ ವಿಮಾನ ನಿಲ್ದಾಣಕ್ಕೆ ನನ್ನ ಹೆಸರನ್ನಿಡುವುದಾಗಿ ತಾವು ಘೋಷಿಸಿರುತ್ತೀರಿ. ತಮ್ಮ ಈ ವಿಶೇಷವಾದ ಪ್ರೀತಿ, ಅಭಿಮಾನಕ್ಕೆ ಧನ್ಯವಾದಗಳು. ಇದಕ್ಕಾಗಿ ಜಿಲ್ಲೆಯ ಎಲ್ಲ ಶಾಸಕರು, ವಿಧಾನ್ ಪರಿಷತ್ ಸದಸ್ಯರು, ಸಂಘಸಂಸ್ಥೆಗಳು ಹಾಗೂ ಎಲ್ಲ ಮುಖಂಡರುಗಳಿಗೆ ನನ್ನ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ.
ಇನ್ನೂ ರಾಷ್ಟ್ರದ ಅಭಿವೃದ್ಧಿಗೆ ಸೇವೆ ಸಲ್ಲಿಸಿದ ಅನೇಕ ಮಹನೀಯರು ಹಾಗೂ ದೇಶಭಕ್ತರಿದ್ದಾರೆ. ಅವರು ನೀಡಿರುವ ಕೊಡುಗೆಗೆ ಹೋಲಿಸಿದಾಗ ನನ್ನದೊಂದು ಅಳಿಲು ಸೇವೆ ಮಾಡಿದ್ದೇನೆಂದು ಧನ್ಯತಾಭಾವ ನನ್ನದು. ಈ ಹಿನ್ನಲೆಯಲ್ಲಿ ನೂತನ ವಿಮಾನ ನಿಲ್ದಾಣಕ್ಕೆ ನನ್ನ ಹೆಸರು ಸೂಕ್ತವಲ್ಲವೆಂದು ಭಾವಿಸುತ್ತೇನೆ.
ಆದುದರಿಂದ, ತಮ್ಮ ಈ ನಿರ್ಧಾರವನ್ನು ಪುನರ್ ಪರಿಶೀಲಿಸಿ, ಸೂಕ್ತ ವೇದಿಕೆಯಲ್ಲಿ ಚರ್ಚಿಸಿ, ರಾಷ್ಟ್ರದ, ನಾಡಿನ ಅಭಿವೃದ್ಧಿಗೆ ಹಾಗೂ ಇತಿಹಾಸಕ್ಕೆ ಕೊಡುಗೆ ನೀಡಿದಂತಹ ಮಹನೀಯರ ಹೆಸರನ್ನು ಈ ಹೊಸ ವಿಮಾನ ನಿಲ್ದಾಣಕ್ಕೆ ನಾಮಕರಣ ಮಾಡಬೇಕೆಂದು ಕೋರುತ್ತೇನೆ ಎಂದು ಸಿಎಂಗೆ ಪತ್ರದ ಮೂಲಕ ಮಾಜಿ ಸಿಎಂ ಯಡಿಯೂರಪ್ಪ ಮನವಿ ಮಾಡಿದ್ದಾರೆ.