ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಬಗ್ಗೆ ಯಡಿಯೂರಪ್ಪ ಸ್ಪಷ್ಟನೆ
ಬೆಂಗಳೂರು : ಕೊರೊನಾ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿರುವ ಹಿನ್ನೆಲೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿ ಮಾಡಲಾಗುತ್ತದೆ ಎಂಬ ವದಂತಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಈ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದು, ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್ ಅವಶ್ಯಕತೆ ಇಲ್ಲ, ಹೀಗಾಗಿ ಲಾಕ್‌ಡೌನ್ ಜಾರಿ ಮಾಡುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಬೆಂಗಳೂರಿನ ಚಾಮರಾಜಪೇಟೆಯ ಶಂಕರಮಠದಲ್ಲಿ ಲೋಕ ಕಲ್ಯಾಣಾರ್ಥವಾಗಿ ವಿಶ್ವ ಹಿಂದು ಪರಿಷತ್ ಹಾಗೂ ವಿವೇಕಾನಂದ ಸೇವಾ ಸಂಸ್ಥೆ ನಡೆಸಿರುವ ಧನ್ವಂತರಿ ಹೋಮದಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ವಿಡಿಯೊ ಕಾನ್ಫರೆನ್ಸ್ ಇದೆ. ಜನರು ಜೀವನ ನಡೆಸಲು ಅನುಕೂಲ ಮಾಡಿ ಕೊಡಲು ಹಾಗೂ ಆರ್ಥಿಕ ಸುಧಾರಣೆಗೆ ಅವಕಾಶ ಮಾಡಿಕೊಡುವಂತೆ ಪ್ರಧಾನಿಗಳಲ್ಲಿ ಮನವಿ ಮಾಡುತ್ತೇನೆ ಎಂದು ತಿಳಿಸಿದರು.
ಕೋವಿಡ್ ಕಾಟದಿಂದ ತಪ್ಪಿಸಿಕೊಳ್ಳಲು ಏನೆಲ್ಲಾ ಪ್ರಯತ್ನ ಮಾಡಬೇಕೋ ಅದೆಲ್ಲವೂ ನಾವು ಮಾಡ್ತಿದ್ದೇವೆ. ಬಹಳ ಬಿಗಿಯಾದ ಕ್ರಮಗಳನ್ನು ಕೂಡ ತೆಗೆದು ಕೊಳ್ಳುತ್ತಿದ್ದೇವೆ. ನಮ್ಮೆಲ್ಲಾ ಸ್ನೇಹಿತರ ಜೊತೆಗೂಡಿ ಕೋವಿಡ್ ತಡೆಯಲು ಶಕ್ತಿ ಮೀರಿ ಕೆಲಸ ಮಾಡ್ತಿದ್ದೇವೆ ಎಂದ ಸಿಎಂ, ಕೋವಿಡ್ ನಿಂದ ರಾಜ್ಯ ಮುಕ್ತವಾಗಬೇಕು. ಜನರು ನೆಮ್ಮದಿಯಿಂದ ಜೀವನ ನಡೆಸಬೇಕು. ಈ ನಿಟ್ಟಿನಲ್ಲಿ ಇಂದು ದೇವರಲ್ಲಿ ಪೂಜೆ ಸಲ್ಲಿಸಿದ್ದೇನೆ ಎಂದರು.
ಇನ್ನು ರಾಜ್ಯದಲ್ಲಿ ಹಣಕಾಸಿನ ಪರಿಸ್ಥಿತಿ ಸರಿ ಇಲ್ಲ. ಆದರೂ 1000 ಕೋಟಿ ರೂ. ಹಣ ಬಿಡುಗಡೆ ಮಾಡಿದ್ದೇನೆ. ರೈತರಿಗೆ 2000 ರೂಪಾಯಿ ಕೊಡುವ ಯೋಜನೆಗೆ ಹಣ ಬಿಡುಗಡೆ ಮಾಡಲಾಗಿದೆ. ಇದರಿಂದ ರಾಜ್ಯದ 50 ಲಕ್ಷ ರೈತರಿಗೆ ಅನುಕೂಲ ಆಗಲಿದೆ ಎಂದು ತಿಳಿಸಿದರು.
ಇದೇ ವೇಳೆ ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಕಡಿಮೆ ಮಾಡಲಾಗಿದೆ ಎಂಬ ವಿಚಾರವಾಗಿ ಮಾತನಾಡಿದ ಅವರು, ರಾಜ್ಯದಲ್ಲಿ ಕೋವಿಡ್ ಪರೀಕ್ಷೆ ಕಡಿಮೆ ಮಾಡಿಲ್ಲ. ಇನ್ನೂ ಟೆಸ್ಟಿಂಗ್ ಹೆಚ್ಚಿಗೆ ಮಾಡುತ್ತಿದ್ದೇವೆ. ನಿರೀಕ್ಷೆಗೆ ಮೀರಿ ಟೆಸ್ಟಿಂಗ್ ಹೆಚ್ಚು ಮಾಡ್ತಿದ್ದೇವೆ. ದೇಶದಲ್ಲಿ ಅತಿ ಹೆಚ್ಚು ಟೆಸ್ಟಿಂಗ್ ಮಾಡ್ತಿರೋ ಯಾವುದಾದರೂ ರಾಜ್ಯ, ಅಂದರೆ ಅದು ಕರ್ನಾಟಕ ಮಾತ್ರ ಎಂದು ಸಿಎಂ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.








