2025ರ ಬಜೆಟ್‌ನಲ್ಲಿ ವೈದ್ಯಕೀಯ ಶಿಕ್ಷಣಕ್ಕೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಲಾಯಿತು. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ವೈದ್ಯಕೀಯ ಅಧ್ಯಯನವನ್ನು ಉತ್ತೇಜಿಸಲು ಪ್ರಮುಖ ಹೆಜ್ಜೆ ಇಟ್ಟಿದ್ದಾರೆ. ಮುಂದಿನ ಐದು ವರ್ಷಗಳಲ್ಲಿ ವೈದ್ಯಕೀಯ ಕಾಲೇಜುಗಳಲ್ಲಿ 75,000 ಹೊಸ ಸೀಟುಗಳನ್ನು ಸೇರಿಸಲಾಗುವುದು ಎಂದು ಘೋಷಿಸಿದರು.
ಕ್ಯಾನ್ಸರ್ ರೋಗಿಗಳ ಆರೈಕೆಗೆ ಹೆಚ್ಚಿನ ಒತ್ತು ನೀಡಲು 2025-26ರ ಹೊತ್ತಿಗೆ ದೇಶಾದ್ಯಂತ 200 ಹೊಸ ಕ್ಯಾನ್ಸರ್ ಕೇಂದ್ರಗಳನ್ನು ಸ್ಥಾಪಿಸಲಾಗುವುದು ಎಂದು ತಿಳಿಸಿದರು.
ಯುವ ಜನಾಂಗದ ಕೌಶಲ್ಯ ಅಭಿವೃದ್ಧಿಗೆ ಪ್ರಾಧಾನ್ಯ ನೀಡುತ್ತಾ, ದೇಶಾದ್ಯಂತ 5 ಕೌಶಲ್ಯ ಅಭಿವೃದ್ಧಿ ಕೇಂದ್ರಗಳನ್ನು ಸ್ಥಾಪಿಸುವ ಯೋಜನೆ ಬಜೆಟ್‌ನಲ್ಲಿ ಪ್ರಸ್ತಾಪಿಸಲಾಯಿತು.
ಇದೇ ರೀತಿ, ಶಿಕ್ಷಣ ಕ್ಷೇತ್ರದಲ್ಲಿ ಪ್ರಗತಿಯನ್ನು ತ್ವರಿತಗೊಳಿಸಲು ಮತ್ತು ಆಧುನಿಕ ತಂತ್ರಜ್ಞಾನವನ್ನು ಬಳಕೆ ಮಾಡಲು 500 ಕೋಟಿ ರೂ. ವೆಚ್ಚದಲ್ಲಿ ಕೃತಕ ಬುದ್ಧಿಮತ್ತೆ (AI) ಶ್ರೇಷ್ಠತಾ ಕೇಂದ್ರ ಸ್ಥಾಪನೆ ಮಾಡುವುದಾಗಿ ಘೋಷಿಸಿದರು.
ಈ ಹೆಜ್ಜೆಗಳು ಯುವಕರ ಭವಿಷ್ಯ ಕಟ್ಟಲು ಮತ್ತು ವೈದ್ಯಕೀಯ ಕ್ಷೇತ್ರದಲ್ಲಿ ಭಾರತವನ್ನು ಹೊಸ ಎತ್ತರಕ್ಕೆ ಎತ್ತಲು ಸಹಾಯ ಮಾಡಲಿವೆ.








