ಬೆಂಗಳೂರು: ಕರ್ನಾಟಕ ರಾಜ್ಯದ ಆರ್ಥಿಕ ದಿಕ್ಸೂಚ ಎಂದೇ ಪರಿಗಣಿಸಲಾಗುವ ರಾಜ್ಯ ಬಜೆಟ್ ಮಂಡನೆಗೆ ಕ್ಷಣಗಣನೆ ಆರಂಭವಾಗಿದೆ. ಇದೇ ಮಾರ್ಚ್ 6ರಂದು ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯನವರು 2026ನೇ ಸಾಲಿನ ಆಯವ್ಯಯ ಮಂಡಿಸಲಿದ್ದಾರೆ. ಈ ಬಾರಿಯ ಬಜೆಟ್ ಮೇಲೆ ರಾಜ್ಯದ ಜನತೆ ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದು, ಅಭಿವೃದ್ಧಿ ಮತ್ತು ಜನಕಲ್ಯಾಣದ ಸಮತೋಲನವನ್ನು ಕಾಯ್ದುಕೊಳ್ಳುವ ಸವಾಲು ಸರ್ಕಾರದ ಮುಂದಿದೆ.
ಈ ಮಹತ್ವದ ಸಂದರ್ಭದಲ್ಲಿ, ರಾಜ್ಯದ ಅಭಿವೃದ್ಧಿಗಾಗಿ 13 ಸೂತ್ರ ಎಂಬ ವಿನೂತನ ಪರಿಕಲ್ಪನೆಯೊಂದಿಗೆ ಶಾಸಕ ಹಾಗೂ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ದಿನೇಶ್ ಗೂಳಿಗೌಡ ಅವರು ಮುಖ್ಯಮಂತ್ರಿಗಳಿಗೆ ಮತ್ತು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬೃಹತ್ ಮನವಿಯೊಂದನ್ನು ಸಲ್ಲಿಸಿದ್ದಾರೆ. ಕೃಷಿ, ಆರೋಗ್ಯ, ತಂತ್ರಜ್ಞಾನ ಮತ್ತು ಆಡಳಿತ ಸುಧಾರಣೆಯ ದೃಷ್ಟಿಯಿಂದ ಈ 13 ಯೋಜನೆಗಳು ಗೇಮ್ ಚೇಂಜರ್ ಆಗಲಿವೆ ಎಂದು ವಿಶ್ಲೇಷಿಸಲಾಗುತ್ತಿದೆ.
ರೈತರು ಮತ್ತು ಹೈನುಗಾರರಿಗೆ ಬಂಪರ್ ಕೊಡುಗೆಯ ನಿರೀಕ್ಷೆ
ರಾಜ್ಯದ ಬೆನ್ನೆಲುಬಾಗಿರುವ ರೈತ ಸಮುದಾಯಕ್ಕೆ ಈ ಬಾರಿಯ ಬಜೆಟ್ನಲ್ಲಿ ಸಿಹಿ ಸುದ್ದಿ ಸಿಗುವ ಸಾಧ್ಯತೆ ದಟ್ಟವಾಗಿದೆ. ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹ ಧನವನ್ನು ಈಗಿನ 5 ರೂ.ಗಳಿಂದ 7 ರೂ.ಗಳಿಗೆ ಹೆಚ್ಚಿಸಬೇಕೆಂಬ ಪ್ರಮುಖ ಬೇಡಿಕೆ ಇದೆ. ಅಲ್ಲದೆ, ರೈತರಿಗೆ ನೀಡುವ ಶೂನ್ಯ ಬಡ್ಡಿದರದ ಸಾಲದ ಒಟ್ಟು ಮೊತ್ತವನ್ನು 28,000 ಕೋಟಿ ರೂ.ಗಳಿಂದ 30,000 ಕೋಟಿ ರೂ.ಗಳಿಗೆ ಏರಿಸುವಂತೆ ಮನವಿ ಮಾಡಲಾಗಿದೆ. ತಾಂತ್ರಿಕ ಕಾರಣಗಳಿಂದ ಸಾಲ ಮನ್ನಾ ಯೋಜನೆಯಿಂದ ವಂಚಿತರಾದ ಸುಮಾರು 50,000 ರೈತರಿಗಾಗಿ 232 ಕೋಟಿ ರೂ. ಬಿಡುಗಡೆ ಮಾಡಿ, ಅವರಿಗೆ ಹೊಸ ಸಾಲ ಪಡೆಯಲು ದಾರಿ ಮಾಡಿಕೊಡುವಂತೆಯೂ ಒತ್ತಾಯಿಸಲಾಗಿದೆ.
ಜಲ ಆಯೋಗ ಮತ್ತು ವೈಜ್ಞಾನಿಕ ನೀರು ನಿರ್ವಹಣೆ
ರಾಜ್ಯದಲ್ಲಿ ನೀರಿನ ನಿರ್ವಹಣೆಯನ್ನು ಹೆಚ್ಚು ವೈಜ್ಞಾನಿಕವಾಗಿಸಲು ನೂತನ ಜಲ ಆಯೋಗ ರಚನೆಗೆ ಪ್ರಸ್ತಾಪಿಸಲಾಗಿದೆ. ಜಲಾಶಯಗಳ ನಿರ್ವಹಣೆ, ಮಳೆ ನೀರು ಕೊಯ್ಲು ಹಾಗೂ ಕೃಷಿ ಮತ್ತು ಕೈಗಾರಿಕೆಗಳಿಗೆ ಸಮರ್ಪಕ ನೀರು ಪೂರೈಕೆ ಕುರಿತು ಸಲಹೆ ನೀಡಲು ಈ ಆಯೋಗದ ಅವಶ್ಯಕತೆ ಇದೆ ಎಂದು ಹೇಳಲಾಗಿದೆ.
ಆರೋಗ್ಯ ಮತ್ತು ಕೈಗಾರಿಕಾ ವಲಯಕ್ಕೆ ಒತ್ತು
ಹೆಚ್ಚುತ್ತಿರುವ ಹೃದ್ರೋಗಿಗಳ ಸಂಖ್ಯೆಯನ್ನು ಗಮನದಲ್ಲಿಟ್ಟುಕೊಂಡು, ಜಯದೇವ ಹೃದ್ರೋಗ ಆಸ್ಪತ್ರೆಯ ನೂತನ ಘಟಕ ಸ್ಥಾಪನೆಗೆ ಬೇಡಿಕೆ ಇಡಲಾಗಿದೆ. ಬೆಂಗಳೂರಿನ ಕೆಂಪೇಗೌಡ ಬಡಾವಣೆಯಲ್ಲಿ 20 ಎಕರೆ ಪ್ರದೇಶದಲ್ಲಿ ಈ ಘಟಕ ಸ್ಥಾಪನೆಯಾದರೆ ರೋಗಿಗಳ ಒತ್ತಡ ಕಡಿಮೆಯಾಗಲಿದೆ. ಅದೇ ರೀತಿ, ವಿಶ್ವವಿಖ್ಯಾತ ಮೈಸೂರು ರೇಷ್ಮೆ ಸೀರೆಗೆ ಇರುವ ಬೇಡಿಕೆಯನ್ನು ಪೂರೈಸಲು, ಪ್ರತಿದಿನ 5000 ಸೀರೆಗಳನ್ನು ಉತ್ಪಾದಿಸುವ ಸಾಮರ್ಥ್ಯದ ನೂತನ ಉತ್ಪಾದನಾ ಘಟಕ ಸ್ಥಾಪಿಸುವಂತೆ ಕೋರಲಾಗಿದೆ.
ತಂತ್ರಜ್ಞಾನ ಮತ್ತು ಪರಿಸರ ಸ್ನೇಹಿ ಆಡಳಿತ
ಉದ್ಯೋಗ ಮಾರುಕಟ್ಟೆಯಲ್ಲಿ ಕೃತಕ ಬುದ್ಧಿಮತ್ತೆ (AI) ಪ್ರಾಬಲ್ಯ ಸಾಧಿಸುತ್ತಿರುವ ಹಿನ್ನೆಲೆಯಲ್ಲಿ, ಯುವಜನತೆಗೆ ಉದ್ಯೋಗಾವಕಾಶ ಕಲ್ಪಿಸಲು ಪ್ರತಿ ಜಿಲ್ಲೆಯಲ್ಲಿ ಎಐ ಕೌಶಲ ಡಿಪ್ಲೊಮಾ ಕೋರ್ಸ್ ಆರಂಭಿಸುವಂತೆ ಸಲಹೆ ನೀಡಲಾಗಿದೆ. ಅಲ್ಲದೆ, ಪರಿಸರ ಮಾಲಿನ್ಯ ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ಇಲಾಖೆಗಳಲ್ಲಿ ಇನ್ಮುಂದೆ ಕೇವಲ ಎಲೆಕ್ಟ್ರಿಕ್ ವಾಹನಗಳನ್ನೇ (E-Vehicles) ಖರೀದಿಸಬೇಕೆಂಬ ಮಹತ್ವದ ಪ್ರಸ್ತಾಪವನ್ನೂ ಮುಂದಿಡಲಾಗಿದೆ.
ಆಡಳಿತ ಸುಧಾರಣೆ ಮತ್ತು ಜನಪ್ರತಿನಿಧಿಗಳ ಸಬಲೀಕರಣ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ 5 ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕಾಗಿ ಐಎಎಸ್ ಅಧಿಕಾರಿ ನೇತೃತ್ವದಲ್ಲಿ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕೆಂಬುದು ಮತ್ತೊಂದು ಪ್ರಮುಖ ಬೇಡಿಕೆ. ಇದರೊಂದಿಗೆ, ಶಾಸಕರ ಪ್ರದೇಶಾಭಿವೃದ್ಧಿ ನಿಧಿಯನ್ನು 2 ಕೋಟಿ ರೂ.ಗಳಿಂದ 4 ಕೋಟಿ ರೂ.ಗಳಿಗೆ ಹೆಚ್ಚಿಸುವುದು ಮತ್ತು ಸ್ಥಳೀಯ ಸಂಸ್ಥೆಗಳ ಸದಸ್ಯರ ಗೌರವಧನ ಹಾಗೂ ಸಭಾ ಭತ್ಯೆಯನ್ನು ಹೆಚ್ಚಿಸುವ ಮೂಲಕ ವಿಕೇಂದ್ರೀಕರಣ ವ್ಯವಸ್ಥೆಯನ್ನು ಬಲಪಡಿಸಲು ಮನವಿ ಮಾಡಲಾಗಿದೆ.
ವಸತಿ ಮತ್ತು ಶಿಕ್ಷಣ ಕ್ಷೇತ್ರ
ವಸತಿ ರಹಿತರಿಗೆ ಆಸರೆಯಾಗಲು ಪ್ರತಿ ವಿಧಾನಸಭಾ ಕ್ಷೇತ್ರಕ್ಕೆ ಕನಿಷ್ಠ 1000 ಮನೆಗಳನ್ನು ಮಂಜೂರು ಮಾಡುವುದು ಮತ್ತು ನಿರ್ಮಾಣ ಸಾಮಗ್ರಿಗಳ ಬೆಲೆ ಏರಿಕೆ ಹಿನ್ನೆಲೆಯಲ್ಲಿ ಘಟಕ ವೆಚ್ಚವನ್ನು ಹೆಚ್ಚಿಸುವಂತೆ ಕೋರಲಾಗಿದೆ. ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ, ಹಳೇ ಮೈಸೂರು ಭಾಗದ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಕಾನೂನು ವಿಶ್ವವಿದ್ಯಾನಿಲಯದ ಪ್ರಾದೇಶಿಕ ಕಚೇರಿಯನ್ನು ಮೈಸೂರಿನಲ್ಲಿ ಸ್ಥಾಪಿಸುವ ಪ್ರಸ್ತಾಪವೂ ಇದೆ.
ಈ 13 ಸೂತ್ರಗಳು ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾಗಿವೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಬಜೆಟ್ ಭಾಷಣದಲ್ಲಿ ಇವುಗಳಲ್ಲಿ ಎಷ್ಟನ್ನು ಘೋಷಣೆ ಮಾಡಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.







