ಧಾರವಾಡ: ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಇಂದು ಬೆಳಿಗ್ಗೆ 6.15ಕ್ಕೆ ಗಂಟೆಗೆ ಧಾರವಾಡದ ಬರಕೊಟ್ರಿಯಲ್ಲಿರುವ ವಿನಯ್ ಕುಲಕರ್ಣಿ ನಿವಾಸಕ್ಕೆ ಆಗಮಿಸಿದ ಸಿಬಿಐ ಅಧಿಕಾರಿಗಳು, 7 ಗಂಟೆ ಹೊತ್ತಿಗೆ ವಶಕ್ಕೆ ಪಡೆದು ಧಾರವಾಡ ಉಪನಗರ ಪೊಲೀಸ್ ಠಾಣೆಗೆ ಕರೆ ತಂದಿದ್ದಾರೆ.
ವಿನಯ್ ಕುಲಕರ್ಣಿ ಅವರ ಖಾಸಗಿ ಕಾರಿನಲ್ಲೇ ಮನೆಯಿಂದ ಕರೆತಂದು ಉಪನಗರ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ವಿನಯ್ ಕುಲಕರ್ಣಿ ಜತೆಗೆ ಸಹೋದರ ವಿಜಯ್ ಕುಲಕರ್ಣಿಯನ್ನು ಸಿಬಿಐ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
2016ರ ಜೂನ್‍ನಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಅವರ ಹತ್ಯೆ ನಡೆದಿತ್ತು. ಯೋಗೀಶ್ ಗೌಡ ಮಾಲೀಕತ್ವದ ಜಿಮ್ ಬಳಿಯಲ್ಲೇ ಅವರ ಹತ್ಯೆ ಮಾಡಲಾಗಿತ್ತು.
ಯೋಗೇಶ್ ಗೌಡ ಕೊಲೆ(murder of Yogesh Gowda) ಪ್ರಕರಣಕ್ಕೆ ಸಂಬಂಧಿಸಿದಂತೆ 6 ಆರೋಪಿಗಳನ್ನು ಬಂಧಿಸಿದ್ದ ಧಾರವಾಡ ಪೊಲೀಸರು, ಚಾರ್ಜ್‍ಶೀಟ್ ಸಲ್ಲಿಸಿದ್ದಾರೆ. ಆದರೆ, 2016ರ ಕಾಂಗ್ರೆಸ್ ಸರ್ಕಾರದಲ್ಲಿ ವಿನಯ್ ಕುಲಕರ್ಣಿ ಸಚಿವರಾಗಿದ್ದ ಅವಧಿಯಲ್ಲಿ ಯೋಗೇಶ್‍ಗೌಡ ಕೊಲೆ ನಡೆದಿತ್ತು. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿನಯ್ ಕುಲಕರ್ಣಿ ಪರ ಪೊಲೀಸರು ಬಿ-ರಿಪೋರ್ಟ್ ಹಾಕಿದ್ದರು.
ಈ ಪ್ರಕರಣ ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ವಾಕ್ಸಮರಕ್ಕೆ ಕಾರಣವಾಗಿತ್ತು. 2018ರ ವಿಧಾನಸಭೆ ಚುನಾವಣೆ ಹಾಗೂ 2019ರ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಧಾರವಾಡ ಜಿಲ್ಲೆಯಲ್ಲಿ ಈ ಕೊಲೆ ಪ್ರಕರಣ ಬಿಜೆಪಿ ಹಾಗೂ ಕಾಂಗ್ರೆಸ್ ನಡುವೆ ಜಿದ್ದಾಜಿದ್ದಿಗೆ ಕಾರಣವಾಗಿತ್ತು.
ಹುಬ್ಬಳ್ಳಿಗೆ ಚುನಾವಣಾ ಪ್ರಚಾರಕ್ಕೆ ಬಂದಿದ್ದ ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿ.ಎಸ್ ಯಡಿಯೂರಪ್ಪ ಕೂಡ ಪ್ರಕರಣ ಉಲ್ಲೇಖಿಸಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬಂದರೆ ಯೋಗೇಶ್‍ಗೌಡ ಕೊಲೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವುದಾಗಿ ಭರವಸೆ ನೀಡಿದ್ದರು.
ಕಳೆದ ವರ್ಷ ಅಂದರೆ, 2019ರ ಜುಲೈ ಅಂತ್ಯದಲ್ಲಿ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮುಖ್ಯಮಂತ್ರಿಯಾದ ಯಡಿಯೂರಪ್ಪ, ಯೋಗೇಶ್‍ಗೌಡ ಕೊಲೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಿದ್ದರು. ತನಿಖೆ ಆರಂಭಿಸಿ ಸತತ ಹಲವು ತಿಂಗಳ ಕಾಲ ಸಾಕ್ಷ್ಯಾಧಾರ ಸಂಗ್ರಹಿಸಿದ ಬಳಿಕ ಸಿಬಿಐ ಅಧಿಕಾರಿಗಳು ವಿನಯ್ ಕುಲಕರ್ಣಿ ಅವರನ್ನು ವಶಕ್ಕೆ ಪಡೆದಿದ್ದಾರೆ.
ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ವಿರುದ್ಧ ಪ್ರತಿಭಟನೆ ನಡೆಸಿದರು.
ಧಾರವಾಡದ ಉಪನಗರ ಠಾಣೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ರಾಜಕೀಯ ದುರುದ್ದೇಶದ್ದಿಂದ ವಿನಯ್ ಕುಲಕರ್ಣಿ ಅವರನ್ನು ಬಂಧಿಸಲಾಗಿದೆ ಎಂದು ಆರೋಪಿಸಿದರು.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel