ಬೆಂಗಳೂರು : ಸಾರಿಗೆ ಇಲಾಖೆಯಲ್ಲಿ ಕಳೆದ ಒಂದು ವರ್ಷದಲ್ಲಿ ಹಮ್ಮಿಕೊಂಡಿದ್ದ ನೂತನ ಸಾಧನೆಗಳ ಕುರಿತಾದ “ಸಾರಿಗೆ ಮಿತ್ರ” ಪುಸ್ತಕವನ್ನು ಇಂದು ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಬಿಡುಗಡೆ ಮಾಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಸರಳ ಸಮಾರಂಭದಲ್ಲಿ ಈ ಪುಸ್ತಕವನ್ನು ಸಿಎಂ ಬಿಡುಗಡೆಗೊಳಿಸಿದ್ದಾರೆ.
ಸಾರಿಗೆ ಇಲಾಖೆ ವ್ಯಾಪ್ತಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರ ಮತ್ತು ಡಿ. ದೇವರಾಜ್ ಅರಸ್ ಟ್ರಕ್ ಟರ್ಮಿನಲ್ಸ್ ಸಂಸ್ಥೆಗಳು ಒಳಪಟ್ಟಿದ್ದು, ಇವುಗಳಲ್ಲಿ ಕೈಗೊಂಡ ನೂತನ ಪ್ರಯತ್ನಗಳ ಬಗ್ಗೆ “ಸಾರಿಗೆ ಮಿತ್ರ” ಬೆಳಕು ಚೆಲ್ಲಲಿದೆ. ಸಾರಿಗೆ ವ್ಯವಸ್ಥೆಯನ್ನು ಮತ್ತಷ್ಟು ವಿನೂತನಗೊಳಿಸಲು ಪ್ರತಿಪಕ್ಷಗಳ ಕೆಲವು ನಾಯಕರ ಅಭಿಪ್ರಾಯಗಳನ್ನು ಮತ್ತು ವಿವಿಧ ಕ್ಷೇತ್ರಗಳಲ್ಲಿನ ಸಲಹೆ ಸೂಚನೆಗಳನ್ನು ಪುಸ್ತಕದಲ್ಲಿ ಸೇರಿಸಲಾಗಿದೆ.
ಈ ಸಮಾರಂಭದಲ್ಲಿ ಸಾರಿಗೆ ಸಚಿವರೂ ಆಗಿರುವ ಡಿಸಿಎಂ ಲಕ್ಷ್ಮಣ್ ಸವದಿ, ಬಿಎಂಟಿಸಿ ಅಧ್ಯಕ್ಷ ನಂದೀಶ್ ರೆಡ್ಡಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಸಾರಿಗೆ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.









