ಬೆಳಗಾವಿಯಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರಾಜ್ಯ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಕರ್ನಾಟಕವನ್ನು ಕುಡುಕರ ರಾಜ್ಯವನ್ನಾಗಿ ಮಾಡಲು ಹೊರಟಿದ್ದಾರೆ ಎಂದು ಆರೋಪಿಸಿದ್ದಾರೆ. ಡಾಬಾ, ಪಾನ್ ಶಾಪ್ಗಳಲ್ಲೂ ಮದ್ಯ ಮಾರಾಟಕ್ಕೆ ಅನುಮತಿ ನೀಡಲಾಗುತ್ತಿದೆ. ಇದು ರಾಜ್ಯದ ಜನತೆಗೆ ಅಪಾಯಕಾರಿ ಬೆಳವಣಿಗೆಯಾಗಿದೆ ಎಂದು ಕಿಡಿಕಾರಿದ್ದಾರೆ.
ರಾಜ್ಯ ಸರ್ಕಾರವೇ 6ನೇ ಗ್ಯಾರಂಟಿಯಾಗಿ ಕುಡುಕರ ರಾಜ್ಯ ಎಂದು ಘೋಷಿಸಿದಂತಾಗಿದೆ ಎಂದು ವ್ಯಂಗ್ಯವಾಡಿದ ವಿಜಯೇಂದ್ರ, ಸರ್ಕಾರದ ನೀತಿಗಳಿಂದ ಜನರಲ್ಲಿ ತೀವ್ರ ಆಕ್ರೋಶ ಮೂಡುತ್ತಿದೆ. ಸರ್ಕಾರದ ವಿರುದ್ಧ ಜನ ದಂಗೆ ಏಳುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತಿದೆ ಎಂದು ಹೇಳಿದ್ದಾರೆ.
ಇದೇ ವೇಳೆ ಗೃಹಲಕ್ಷ್ಮಿ ಯೋಜನೆ ಕುರಿತಾಗಿಯೂ ಅವರು ಸರ್ಕಾರದ ಮೇಲೆ ಗಂಭೀರ ಆರೋಪ ಮಾಡಿದ್ದಾರೆ. ಈ ಯೋಜನೆಯ ಕಳೆದ ಎರಡು ತಿಂಗಳ ಕಂತಿನ ಹಣವಾದ ಸುಮಾರು ₹5,000 ಕೋಟಿ ಇನ್ನೂ ಫಲಾನುಭವಿಗಳ ಖಾತೆಗೆ ಜಮೆಯಾಗಿಲ್ಲ. ಆದರೆ ಸರ್ಕಾರ ತಪ್ಪು ಮಾಹಿತಿ ನೀಡುತ್ತಿದೆ ಎಂದು ಹೇಳಿದ್ದಾರೆ. ಗ್ಯಾರಂಟಿ ಯೋಜನೆಗಳ ಜಾರಿಗೆ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದ ವಿಜಯೇಂದ್ರ, ಜನರ ಸಮಸ್ಯೆಗಳಿಗೆ ಸ್ಪಂದಿಸದೇ ಕೇವಲ ಪ್ರಚಾರದಲ್ಲಿ ತೊಡಗಿರುವ ಸರ್ಕಾರಕ್ಕೆ ಜನರು ಶೀಘ್ರದಲ್ಲೇ ಪಾಠ ಕಲಿಸುತ್ತಾರೆ ಎಂದು ಹೇಳಿದ್ದಾರೆ.








