ಬೆಂಗಳೂರು : ಕೋವಿಡ್ 19 ನಿಯಂತ್ರಿಸುವ ಸಂದರ್ಭದಲ್ಲಿ ಪೊಲೀಸ್ ಸಿಬ್ಬಂದಿ ಅತ್ಯತ್ತಮ ಸೇವೆ ಸಲ್ಲಿಸಿದ್ದಾರೆ ಎಂದು ಪೊಲೀಸ್ ಇಲಾಗೆ ಬಗ್ಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೆಚ್ಚುಗೆ ವ್ಯಕ್ತಡಿಸಿದ್ದಾರೆ.
ಇಂದು ನಡೆದ ಗೃಹ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಕೊರೊನಾ ಸೋಂಕು ನಿಯಂತ್ರಣ ಮಾಡುವ ಸಂದರ್ಭದಲ್ಲಿ ಇಡಿ ಪೊಲೀಸ್ ಇಲಾಖೆ ಅತ್ಯತ್ತಮ ಸೇವೆ ಸಲ್ಲಿಸಿದೆ ಎಂದು ಪೊಲೀಸ್ ಇಲಾಖೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದರು. ಇದೆ ವೇಳೆ ಇಲಾಖೆಯ ಸುಧಾರಣೆಗೆ ಅಗತ್ಯ ನೆರವು ನೀಡುವುದಾಗಿ ಭರವಸೆ ನೀಡಿದರು.
ರಾಜ್ಯದಲ್ಲಿ ಪೊಲೀಸ್ ಇಲಾಖೆ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿದೆ. ರಾಜ್ಯದಲ್ಲಿ ಬದಲಾದ ಸನ್ನಿವೇಶಗಳಲ್ಲಿ ಸಿಇಎನ್ (ಸೈಬರ್ ಕ್ರೈಂ, ಎಕನಾಮಿಕ್ ಅಫೆನ್ಸ್ ಮತ್ತು ನಾರ್ಕೊಟಿಕ್ಸ್) ಠಾಣೆಗಳನ್ನು ಬಲಪಡಿಸಲು ಆದ್ಯತೆ ನೀಡಬೇಕು. ಅದರ ಜೊತೆಗೆ ಅಪರಾಧಗಳನ್ನು ತ್ವರಿತವಾಗಿ ಪತ್ತೆ ಹಚ್ಚುವ ನಿಟ್ಟಿನಲ್ಲಿ ಫಾರೆನ್ಸಿಕ್ ಪ್ರಯೋಗಾಲಯಗಳನ್ನು ಬಲಪಡಿಸಲು ಕ್ರಮ ವಹಿಸಲಾಗುವುದು. ತುರ್ತು ಸ್ಪಂದನೆ ವ್ಯವಸ್ಥೆ ಯೋಜನೆಯಡಿ ವಾಹನ ಖರೀದಿಗೆ ಅಗತ್ಯ ಅನುದಾನ ಒದಗಿಸಲಾಗುವುದು. ಮುಂದಿನ ದಿನಗಳಲ್ಲಿ ಖಾಸಗಿ ಸಂಸ್ಥೆಗಳಿಗೆ ಹೋಂ-ಗಾರ್ಡ್ ಗಳ ಸೇವೆಯನ್ನು ಒದಗಿಸುವ ಕುರಿತು ಕ್ರಮ ತೆಗೆದುಕೊಳ್ಳಿ ಎಂದು ಅಧಿಕಾರಿಗಳಿಗೆ ಸಿ.ಎಂ. ಬಿ.ಎಸ್. ಯಡಿಯೂರಪ್ಪ ಸೂಚನೆ ನೀಡಿದ್ದಾರೆ.
ಕಾರಾಗೃಹಗಳಲ್ಲಿ ಕೋವಿಡ್-19 ಸಂದರ್ಭದಲ್ಲಿ ಎಲ್ಲ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಆದ್ದರಿಂದ ಒಂದೇ ಒಂದು ಪ್ರಕರಣ ವರದಿಯಾಗಿಲ್ಲ. ಸುಪ್ರೀಂ ಕೋರ್ಟಿನ ಸೂರ್ಚಿ ಅನ್ವಯ 5005 ಜನರನ್ನು ಜಾಮೀನಿನ ಮೇಲೆ ಮತ್ತು ಪೆರೋಲ್ ಮೇಲೆ ಬಿಡುಗಡೆ ಮಾಡಲಾಗಿದೆ. ಕಾರಾಗೃಹಗಳಲ್ಲಿ ಬಂಧಿಗಳ ದಟ್ಟಣೆಯನ್ನು 110% ರಿಂದ 95%ಕ್ಕೆ ಇಳಿಸಲಾಗಿದೆ. ಇದೆ ವೇಳೆ ಬಿಎಸ್ವೈ ಗೃಹ ಇಲಾಖೆಯಡಿ ಬರುವ ಎಲ್ಲ ಇಲಾಖೆಗಳ ವಿವಿಧ ಮೂಲ ಸೌಕರ್ಯ ಅಭಿವೃದ್ಧಿಗೆ ಸಂಬಂಧಿಸಿದಂತೆ ವಸ್ತುಸ್ಥಿತಿ ಆಧರಿಸಿ, ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಹೇಳಿದ್ದಾರೆ. ರಾಜ್ಯದಲ್ಲಿ ವಿವಿಧ ಸರ್ಕಾರಿ ಸಂಸ್ಥೆಗಳಲ್ಲಿ ಬೃಹತ್ ಮೊತ್ತದ ಅನುದಾನವನ್ನು ಬ್ಯಾಂಕಿನಲ್ಲಿ ಠೇವಣಿ ಇಡುವ ಸಂದರ್ಭದಲ್ಲಿ ಯಾವುದೇ ರೀತಿಯ ದುರುಪಯೋಗವಾಗದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು. ದುರುಪಯೋಗಗೊಂಡ ಪ್ರಕರಣಗಳಲ್ಲಿ ಅಧಿಕಾರಿಗಳ ವಿರುದ್ಧ ಕಠಿಣ ಶಿಸ್ತು ಕ್ರಮ ತೆಗೆದುಕೊಳ್ಳಬೇಕೆಂದು ಖಡಕ್ ಆಗಿ ಹೇಳಿದ್ದಾರೆ.
ಸಭೆಯಲ್ಲಿ ಕೆಲಸ ಕಳೆದುಕೊಳ್ಳುವ ಭೀತಿಯಲ್ಲಿರುವ ಮೂರು ಸಾವಿರಕ್ಕೂ ಹೆಚ್ಚು ಹೋಂ ಗಾರ್ಡ್ ಗಳನ್ನು ಸೇವೆಯಲ್ಲಿ ಮುಂದುವರಿಸಿ ವಿವಿಧ ಇಲಾಖೆಗಳಿಗೆ ನಿಯೋಜಿಸಲು ತೀರ್ಮಾನಿಸಲಾಯಿತು. ಇನ್ನೂ ಸಭೆಗೆ ಮಾಹಿತಿ ನೀಡಿದ ಅಧಿಕಾರಿಗಳು, ಮುಂಗಾರು ಸಂದರ್ಭದಲ್ಲಿ 200 ಮಂದಿ ಎಸ್.ಡಿ.ಆರ್.ಎಫ್ ಸಿಬ್ಬಂದಿಗೆ ತರಬೇತಿ ಪ್ರಾರಂಭವಾಗಿದೆ. ಕೆಲವು ದಿನಗಳಲ್ಲಿ ಅವರನ್ನು ನಾಲ್ಕು ವಿಭಾಗಗಳಲ್ಲಿ ನಿಯೋಜಿಸಲಾಗುತ್ತದೆ ಎಂದು ಹೇಳಿದರು.
ಸಭೆಯಲ್ಲಿ ಗೃಹ ಸಚಿವ ಬಸವರಾಜ ಬೊಮ್ಮಾಯಿ, ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿ.ಎಂ. ವಿಜಯಭಾಸ್ಕರ್, ಗೃಹ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ಪೊಲೀಸ್ ಮಹಾನಿರ್ದೇಶಕ ಮತ್ತು ಮಹಾನಿರೀಕ್ಷಕರಾದ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.