ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ಆರ್ಭಟ ಜೋರಾದ ಹಿನ್ನೆಲೆ ರಾಜ್ಯ ಸರ್ಕಾರ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಒಂದು ವಾರದ ಲಾಕ್ ಡೌನ್ ಘೋಷಿಸಿದೆ. ಇದರ ಮಧ್ಯೆ ಈ ಲಾಕ್ ಡೌನ್ ಅವಧಿಯನ್ನು ವಿಸ್ತರಿಸಲಾಗುವುದು ಎಂಬ ಚರ್ಚೆಗಳೂ ನಡೆಯುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ದಾರೆ.
ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ನಡೆದ ಟಾಸ್ಕ್ ಪೋರ್ಸ್ ಸಭೆಯ ಬಳಿಕ ಈ ಬಗ್ಗೆ ಟ್ವೀಟ್ ಮಾಡಿರುವ ಸಿಎಂ, ಕೊರೋನಾ ಸೋಂಕು ತೀವ್ರವಾಗಿ ವ್ಯಾಪಿಸುತ್ತಿರುವ ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಯಲ್ಲಿ ಒಂದು ವಾರ ಮಾತ್ರ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಆದರೆ ಯಾವುದೇ ಕಾರಣಕ್ಕೂ ವಾರದ ಬಳಿಕ ಲಾಕ್ ಡೌನ್ ವಿಸ್ತರಿಸುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.
ಎರಡೂ ಜಿಲ್ಲೆಗಳಲ್ಲಿ ಹೆಚ್ಚುತ್ತಿರುವ ಕೋವಿಡ್ ಪ್ರಕರಣಗಳ ನಿಯಂತ್ರಣಕ್ಕಾಗಿ ಲಾಕ್ ಡೌನ್ ವಿಧಿಸಲಾಗಿದ್ದು, ಒಂದು ವಾರದೊಳಗೆ ವ್ಯವಸ್ಥೆಗಳನ್ನು ಸರಿಪಡಿಸಿಕೊಂಡು, ಎಲ್ಲ ಅಗತ್ಯ ಸಿದ್ದತೆ ಗಳನ್ನು ಮಾಡಿಕೊಳ್ಳಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.








