ಬೆಂಗಳೂರು : ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ. ಇನ್ನೊಂದೆಡೆ ರಾಜ್ಯದಲ್ಲಿ ಮತ್ತೆ ಲಾಕ್ ಡೌನ್ ಜಾರಿಯಾಗಲಿದೆ ಎಂಬ ವದಂತಿ ಎಲ್ಲೆಡೆ ಹರಿದಾಡುತ್ತಿದ್ದು, ಈ ಬಗ್ಗೆ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು ಸ್ಪಷ್ಟನೆ ನೀಡಿದ್ದಾರೆ.
ವಿಧಾನಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ ಆಯೋಜಿಸಿದ್ದ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಮ್ ಅವರ ಪುಣ್ಯತಿಥಿ ಅಂಗವಾಗಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ರಾಜ್ಯದಲ್ಲಿ ಯಾವುದೇ ಕಾರಣಕ್ಕೂ ಪುನಃ ಲಾಕ್ ಡೌನ್ ಜಾರಿ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕೊರೊನಾ ಜೊತೆ ಬದುಕಬೇಕಾದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕು ಪ್ರಕರಣಗಳು ಹೆಚ್ಚಾಗುತ್ತಿದ್ದರೂ ಸರ್ಕಾರದ ಮುಂದೆ ಲಾಕ್ ಡೌನ್ ಮಾಡುವ ಆಲೋಚನೆ ಇಲ್ಲ ಎಂದು ಸ್ಪಷ್ಟಪಡಿಸಿದರು.
ಇನ್ನು ನಾನು ರಾಜ್ಯದ ಜನತೆ ಹಾಗೂ ಬೆಂಗಳೂರಿನ ನಾಗರಿಕರಿಗೆ ಮನವಿ ಮಾಡಿಕೊಳ್ಳುವುದೇನೆಂದರೆ ಲಾಕ್ ಡೌನ್ ಮಾಡಲಾಗುತ್ತಿದೆ ಎಂಬುದು ಕೇವಲ ವದಂತಿ ಅಷ್ಟೇ. ಇಂತಹ ಊಹಪೋಹಗಳಿಗೆ ಯಾರೊಬ್ಬರು ಕಿವಿಗೊಡಬಾರದು ಎಂದು ಮನವಿ ಮಾಡಿಕೊಂಡರು.
ಈ ವೇಳೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಗೃಹ ಸಚಿವ ಬಸವರಾಜ್ ಬೊಮ್ಮಾಯಿ, ಸಂಸದ ಎ.ನಾರಾಯಣಸ್ವಾಮಿ, ಮಾಜಿ ಸಚಿವ ಎಚ್.ಆಂಜನೇಯ ಮತ್ತಿತರರು ಉಪಸ್ಥಿತರಿದ್ದರು.