ಕರ್ನಾಟಕ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಜೂನ್ 11ರಂದು ದೆಹಲಿಗೆ ಭೇಟಿ ನೀಡುವ ಸಾಧ್ಯತೆ ಇದೆ. ಅದೇ ದಿನ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ನಡೆಯಲಿರುವ ನೀತಿ ಆಯೋಗದ ಸಭೆಯಲ್ಲಿ ಭಾಗವಹಿಸಲು ಸಿಎಂ ದೆಹಲಿಗೆ ತೆರಳಲಿದ್ದಾರೆ ಎನ್ನಲಾಗಿದೆ.
ರಾಜ್ಯದ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಡಿಕೆ ಶಿವಕುಮಾರ್ ಅವರ ಮೊದಲ ನೀತಿ ಆಯೋಗ ಸಭೆ ಇದಾಗಲಿದ್ದು, ಕೇಂದ್ರ-ರಾಜ್ಯ ಸಂಬಂಧಗಳು ಹಾಗೂ ಅಭಿವೃದ್ಧಿ ಯೋಜನೆಗಳ ಕುರಿತು ಮಹತ್ವದ ಚರ್ಚೆಗಳು ನಡೆಯುವ ನಿರೀಕ್ಷೆಯಿದೆ.
ಕಳೆದ ಬಾರಿ ನಡೆದ ನೀತಿ ಆಯೋಗದ ಸಭೆಯಲ್ಲಿ ಅಂದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿರಲಿಲ್ಲ. ಆದರೆ ಈ ಬಾರಿ ಡಿಕೆ ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಹೆಚ್ಚಿದ್ದು, ಪ್ರಧಾನಿ ಮೋದಿ ಅವರೊಂದಿಗೆ ಪ್ರತ್ಯೇಕವಾಗಿ ಭೇಟಿಯಾಗಿ ರಾಜ್ಯದ ಪ್ರಮುಖ ಯೋಜನೆಗಳು, ಅನುದಾನ ಹಾಗೂ ಅಭಿವೃದ್ಧಿ ವಿಚಾರಗಳ ಕುರಿತು ಚರ್ಚಿಸುವ ಸಾಧ್ಯತೆಯೂ ಇದೆ.
ಈ ಭೇಟಿ ಅಧಿಕೃತವಾಗಿ ಇನ್ನೂ ದೃಢಪಟ್ಟಿಲ್ಲವಾದರೂ, ದೆಹಲಿ ಪ್ರವಾಸ ರಾಜ್ಯ ರಾಜಕೀಯ ಹಾಗೂ ಆಡಳಿತಾತ್ಮಕ ವಲಯದಲ್ಲಿ ಕುತೂಹಲ ಮೂಡಿಸಿದೆ.








