ಕರ್ನಾಟಕದ ನೂತನ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ಇಂದು ತಮ್ಮ ಸ್ವಕ್ಷೇತ್ರ ಕನಕಪುರಕ್ಕೆ ಭೇಟಿ ನೀಡಲಿದ್ದಾರೆ. ಮುಖ್ಯಮಂತ್ರಿ ಆದ ಬಳಿಕ ಇದೇ ಮೊದಲ ಬಾರಿಗೆ ಕ್ಷೇತ್ರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಭರ್ಜರಿ ಸ್ವಾಗತಕ್ಕೆ ಸಿದ್ಧತೆಗಳು ನಡೆಯುತ್ತಿವೆ.
ಈ ವೇಳೆ ಡಿಕೆ ಶಿವಕುಮಾರ್ ತೆರೆದ ವಾಹನದಲ್ಲಿ ಬೃಹತ್ ರೋಡ್ ಶೋ ನಡೆಸಲಿದ್ದು, ಸಾವಿರಾರು ಕಾರ್ಯಕರ್ತರು ಹಾಗೂ ಬೆಂಬಲಿಗರು ಭಾಗವಹಿಸುವ ನಿರೀಕ್ಷೆಯಿದೆ. ಕನಕಪುರ ಮತ್ತು ಹಾರೋಹಳ್ಳಿ ತಾಲ್ಲೂಕುಗಳಲ್ಲಿ ವಿಶೇಷ ವೇದಿಕೆಗಳು, ಸ್ವಾಗತ ಕಮಾನುಗಳು ಹಾಗೂ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ.
ರೋಡ್ ಶೋ ವೇಳೆ ಕ್ಷೇತ್ರದ ವಿವಿಧ ಗ್ರಾಮಗಳಿಗೆ ಭೇಟಿ ನೀಡಲಿರುವ ಸಿಎಂ, ತಮ್ಮ ಗೆಲುವು ಹಾಗೂ ಮುಖ್ಯಮಂತ್ರಿಯಾಗಿ ಆಯ್ಕೆಯಾಗಲು ಬೆಂಬಲ ನೀಡಿದ ಮತದಾರರಿಗೆ ಕೃತಜ್ಞತೆ ಸಲ್ಲಿಸಲಿದ್ದಾರೆ. ಜೊತೆಗೆ ಕ್ಷೇತ್ರದ ಅಭಿವೃದ್ಧಿ ಯೋಜನೆಗಳು ಹಾಗೂ ಸರ್ಕಾರದ ಮುಂದಿನ ಆದ್ಯತೆಗಳ ಕುರಿತು ಜನರೊಂದಿಗೆ ಸಂವಾದ ನಡೆಸುವ ಸಾಧ್ಯತೆಯೂ ಇದೆ.
ಡಿಕೆ ಶಿವಕುಮಾರ್ ಅವರ ಈ ಮೊದಲ ಸ್ವಕ್ಷೇತ್ರ ಭೇಟಿ ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿದ್ದು, ಕನಕಪುರದಲ್ಲಿ ಹಬ್ಬದ ವಾತಾವರಣ ನಿರ್ಮಾಣವಾಗಿದೆ.







