ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ಸಲ್ಲಿಸಿದ್ದ ಅರ್ಜಿಯ ಭವಿಷ್ಯ ನಾಳೆಗೆ ಹೊರ ಬೀಳಲಿದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ ಕೇಸ್ ನಲ್ಲಿ (MUDA Case) ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (CM Siddaramaiah) ರಿಟ್ ಅರ್ಜಿ ಸಲ್ಲಿಸಿದ್ದರು. ಸದ್ಯ ಹೈಕೋರ್ಟ್ (High Court) ಮಂಗಳವಾರ ತೀರ್ಪು ಪ್ರಕಟಿಸಲಿದೆ.
ವಾದ-ವಿವಾದ ಆಲಿಸಿದ ನ್ಯಾ. ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ಮಧ್ಯಾಹ್ನ 12ಕ್ಕೆ ತೀರ್ಪು ಪ್ರಕಟಿಸಲಿದ್ದಾರೆ. ಸಿದ್ದರಾಮಯ್ಯ ಪರವಾಗಿ ಹಿರಿಯ ಸುಪ್ರೀಂ ಕೋರ್ಟ್ ವಕೀಲ ಅಭಿಷೇಕ್ ಮನು ಸಿಂಘ್ವಿ ಹಲವರು ವಾದಿಸಿದ್ದಾರೆ.
ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿ ಸಿದ್ದರಾಮಯ್ಯ ಹೆಸರಿನಲ್ಲಿದ್ದ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿ 3.16 ಎಕರೆ ಜಮೀನನ್ನು ದೇವನೂರು ಬಡಾವಣೆ ನಿರ್ಮಾಣಕ್ಕೆ ಭೂಸ್ವಾಧೀನ ಮಾಡಿಕೊಳ್ಳಲಾಗಿತ್ತು.
ಈ ಜಾಗವನ್ನು ಪತ್ನಿ ಪಾರ್ವತಿ ಅವರಿಗೆ ದಾನ ಪತ್ರದ ಮೂಲಕ ಅವರ ಸಹೋದರ ನೀಡಿದ್ದರು. ಒಟ್ಟು 1,48,104 ಚದರ ಅಡಿ ಜಾಗ ಇತ್ತು. ಅದರ ಬದಲಿಗೆ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ 2021ರಲ್ಲಿ ವಿಜಯನಗರ ಬಡಾವಣೆಯಲ್ಲಿ 38,284 ಚದರ ಅಡಿ ಜಾಗ ನೀಡಿತ್ತು.
ಮೈಸೂರಿನ ಕೆಸರೆ ಗ್ರಾಮದ ಸರ್ವೆ ನಂಬರ್ 464ರಲ್ಲಿರುವ 3 ಎಕರೆ 16 ಗುಂಟೆ ಜಾಗವನ್ನು ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರ ಸಹೋದರ, ಪಾರ್ವತಿಯವರಿಗೆ ದಾನವಾಗಿ ನೀಡಿದ್ದರು. ಈ ಜಾಗವನ್ನು ಅಭಿವೃದ್ಧಿಗಾಗಿ ಪ್ರಾಧಿಕಾರ ಕಾನೂನು ಪ್ರಕಾರವೇ ವಶಪಡಿಸಿಕೊಂಡಿತ್ತು. 1998 ರಲ್ಲಿ ನೋಟಿಫೈ ಮಾಡಿತ್ತು. ಇದೇ ಜಾಗದಲ್ಲಿ ದೇವನೂರು 3ನೇ ಹಂತದ ಬಡಾವಣೆಯನ್ನೂ ಅಭಿವೃದ್ಧಿ ಮಾಡಿದೆ.
ವಶಪಡಿಸಿಕೊಂಡ ಜಾಗಕ್ಕೆ ಬದಲಿ ಭೂಮಿ ಕೊಡುವುದು ಪ್ರಾಧಿಕಾರದ ಕರ್ತವ್ಯ. ಹೀಗಾಗಿ ಬದಲಿ ಭೂಮಿ ನೀಡುವಂತೆ 2014ರಲ್ಲಿ ಸಿಎಂ ಪತ್ನಿ ಅರ್ಜಿ ಹಾಕಿದ್ದರು. 2021ರಲ್ಲಿ ಮತ್ತೊಂದು ಪತ್ರ ಬರೆದು 50:50 ಅನುಪಾತದಲ್ಲಿ ಬದಲಿ ನಿವೇಶನ ಕೊಡಿ ಎಂದು ಮನವಿ ಸಲ್ಲಿಸಿದ್ದರು. ಸಿಎಂ ಪತ್ನಿ ಕೋರಿಕೆಯಂತೆ 2021ರಲ್ಲಿ 50:50 ಅನುಪಾತದಲ್ಲಿ ಭೂಮಿ ನೀಡಲಾಗಿದೆ.
ವಶಪಡಿಸಿಕೊಂಡ ಜಾಗ ಬಿಟ್ಟು ಅಥವಾ ಸಮಾನಾಂತರವಾದ ಜಾಗ ಬಿಟ್ಟು ವಿಜಯನಗರದಲ್ಲಿ ಅಭಿವೃದ್ಧಿ ಆಗಿರುವ 38,284 ಚದರಡಿ ಭೂಮಿ ಹಂಚಿಕೆ ಮಾಡಲಾಗಿದೆ. ಅಲ್ಲದೇ 1998ರಲ್ಲಿ ಕಳೆದುಕೊಂಡ ಭೂಮಿಗೆ 2021ರಲ್ಲಿ ಪರಿಹಾರ ನೀಡಲಾಗಿದೆ ಎಂಬುದು ಆರ್‌ಟಿಐ ಕಾರ್ಯಕರ್ತರ ಆರೋಪ. ಸಿಎಂ ಪತ್ನಿ ಅಲ್ಲದೇ ಹಲವು ಮಂದಿ ಭೂಮಿಯನ್ನು ಮುಡಾ ವಶಪಡಿಸಿಕೊಂಡಿದೆ. ಸಿಎಂ ಪತ್ನಿಗೆ ಹಂಚಿಕೆ ಮಾಡಿದಂತೆ ಇವರಿಗೂ ಜಾಗವನ್ನು ವಿಜಯನಗರ ಬಡಾವಣೆಯಲ್ಲಿ ಜಾಗ ಹಂಚಿಕೆ ಮಾಡಿಲ್ಲ. 50:50 ಅನುಪಾತ ನಿಯಮವನ್ನ ದುರುಪಯೋಗಪಡಿಸಿಕೊಂಡು 1998ರಲ್ಲಿ ವಶಪಡಿಸಿಕೊಂಡ ಜಾಗಕ್ಕೆ 2020ರಲ್ಲಿ ಜಾರಿಗೆ ಬಂದ 50-50 ಅನುಪಾತ ಬಳಸಿದ್ದೇಕೆ ಎನ್ನುವುದೇ ಈಗ ವಾದವಾಗಿದೆ.
ಸಿಎಂ ಪತ್ನಿಗೆ ಆರ್ಥಿಕ ಲಾಭ ಮಾಡಿಕೊಡಲು ಮುಡಾ ಅಧಿಕಾರಿಗಳು ಸರ್ಕಾರಕ್ಕೆ ಆರ್ಥಿಕ ನಷ್ಟ ಮಾಡಿದ್ದಾರೆ. ಸಿಎಂ ಅವರು ಅಧಿಕಾರ ದುರ್ಬಳಕೆ ಮಾಡಿಕೊಂಡಿದ್ದರಿಂದ ಈ ಜಾಗ ಹಂಚಿಕೆ ಮಾಡಲಾಗಿದೆ ಎನ್ನುವ ಗಂಭೀರ ಆರೋಪ ಕೇಳಿಬಂದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದನ್ನು ಪ್ರಶ್ನಿಸಿ ಸಿಎಂ ಅರ್ಜಿ ಸಲ್ಲಿಸಿದ್ದಾರೆ. ಕೋರ್ಟ್ ಯಾವ ಆದೇಶ ನೀಡುತ್ತದೆ ನೋಡಬೇಕಿದೆ.








