ಬೆಂಗಳೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ತನಿಖೆಗೆ ಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಮನೆ ಮಾಡಿದೆ. ಈ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಸಂಪೂರ್ಣ ವಿವರವನ್ನು ಹೈಕಮಾಂಡ್ ಗೆ ಕಲುಹಿಸಿದ್ದಾರೆ.
ಕಾಂಗ್ರೆಸ್ ನಾಯಕ ಕೆ.ಸಿ.ವೇಣುಗೋಪಾಲ್ ಮೂಲಕ ಕೋರ್ಟ್ ಆದೇಶದ ಕುರಿತು ಸಿಎಂ ಹೈಕಮಾಂಡ್ ಗಮನಕ್ಕೆ ತಂದಿದ್ದಾರೆ. ಬುಧವಾರ ಕೇರಳದ ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯ ಭಾಗಿಯಾಗಿದ್ದರು. ಕಾರ್ಯಕ್ರಮ ಮುಗಿದ ನಂತರ ಪ್ರಕರಣದ ಕೇಸ್ ಬಗ್ಗೆ ಸಂಪೂರ್ಣ ವಿವರಣೆ ನೀಡಿ, ಸಹಕಾರ ಕೇಳಿದ್ದಾರೆ ಎಂದು ತಿಳಿದು ಬಂದಿದೆ.
ಈಗಾಗಲೇ ಸಿದ್ದರಾಮಯ್ಯ ಅವರು ಹೈಕೋರ್ಟ್ ಆದೇಶ ವಿರುದ್ಧ ಮೇಲ್ಮನವಿ ಸಲ್ಲಿಸಲು ಕೂಡ ಸಿದ್ಧತೆ ಮಾಡಿಕೊಂಡಿದ್ದಾರೆ. ಕಾನೂನು ತಜ್ಞರೊಂದಿಗೆ ಕೂಡ ಚರ್ಚೆ ನಡೆಸಿದ್ದಾರೆ. ಇಂದು ಮೇಲ್ಮನವಿ ಸಲ್ಲಿಸುವ ಸಾಧ್ಯತೆ ಕೂಡ ಇದೆ.
ಈಗಾಗಲೇ ಕೋರ್ಟ್ ಆದೇಶದ ನಂತರ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ನಾನು ಯಾವುದೇ ತನಿಖೆಗೂ ಸಿದ್ಧನಿದ್ದೇನೆ. ನಾನು ಯಾವುದೇ ತಪ್ಪು ಮಾಡಿಲ್ಲ. ನನಗೆ ನ್ಯಾಯ ಸಿಗುವ ವಿಶ್ವಾಸವಿದೆ. ನಮ್ಮ ಸರ್ಕಾರ ಅಸ್ಥಿರಗೊಳಿಸಲು ರಾಜ್ಯಪಾಲರನ್ನು ಬಿಜೆಪಿ ಹಾಗೂ ಜೆಡಿಎಸ್ ಬಳಕೆ ಮಾಡಿಕೊಂಡಿವೆ. ವಿಪಕ್ಷಗಳ ಸರ್ಕಾರ ಕೆಡವೋದು ಕೇಂದ್ರದ ಅಜೆಂಡಾ. ಇದನ್ನು ರಾಜ್ಯದಲ್ಲಿಯೂ ಮಾಡುತ್ತಿದ್ದಾರೆ. ಇದಕ್ಕೆ ನಾವು ಹೆದರುವುದಿಲ್ಲ ಹಾಗೂ ಅವಕಾಶ ಮಾಡಿಕೊಡುವುದಿಲ್ಲ ಎಂದಿದ್ದಾರೆ.