ಹುಬ್ಬಳ್ಳಿ: ಇತ್ತೀಚೆಗಷ್ಟೇ ಕೊಲೆಯಾಗಿರುವ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರ ತಂದೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿ ಕ್ಷಮೆ ಕೋರಿದ್ದಾರೆ ಎನ್ನಲಾಗಿದೆ.
ಮಂಗಳವಾರ ಕಾನೂನು ಸಚಿವ ಎಚ್.ಕೆ ಪಾಟೀಲ್ ನೇಹಾ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಫೋನ್ ನಲ್ಲಿ ನೇಹಾ ಅವರ ತಂದೆಯೊಂದಿಗೆ ಸಿಎಂ ಸಿದ್ದರಾಮಯ್ಯ ಮಾತನಾಡಿದ್ದಾರೆ. ಅಲ್ಲದೇ, ನಿಮ್ಮೊಂದಿಗೆ ನಾವಿದ್ದೇವೆ ಎಂಬ ಭರವಸೆಯನ್ನು ಕೂಡ ನೀಡಿದ್ದಾರೆ.
ಈ ವೇಳೆ ನೇಹಾ ತಂದೆ, ಈ ಪ್ರಕರಣದ ತನಿಖೆಯನ್ನು ಪ್ರಾಮಾಣಿಕವಾಗಿ ಆದಷ್ಟು ಬೇಗ ಮುಗಿಸಿ ನಮಗೆ ನ್ಯಾಯ ಒದಗಿಸಬೇಕು ಎಂದು ಮನವಿ ಮಾಡಿದ್ದಾರೆ. ಆಗ ಸಿಎಂ, ಆದಷ್ಟು ಬೇಗನೇ ನಿಮಗೆ ನ್ಯಾಯ ಕೊಡ್ತೀನಿ ಎಂದು ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಎಚ್ ಕೆ ಪಾಟೀಲ್, ನೇಹಾ ಹಿರೇಮಠ ಪ್ರಕರಣ ಇತ್ಯರ್ಥಕ್ಕೆ ವಿಳಂಬ ಆಗಬಾರದು ಎಂಬ ಕಾರಣಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನ ಮಾಡಲಾಗಿದೆ. ಇವತ್ತು ಉಚ್ಛ ನ್ಯಾಯಾಲಕ್ಕೆ ವಿಶೇಷ ನ್ಯಾಯಾಲಯ ಸ್ಥಾಪನೆ ಕುರಿತು ಪತ್ರ ತಲುಪಲಿದೆ. ಈ ಪ್ರಕರಣದಲ್ಲಿ ತಪ್ಪಿತಸ್ಥರಿಗೆ ಸೂಕ್ತ ಶಿಕ್ಷೆ ಆಗಬೇಕಿದೆ. ಈ ನಿಟ್ಟಿನಲ್ಲಿಯೇ ವಿಶೇಷ ನ್ಯಾಯಾಲಯ ಸ್ಥಾಪನೆಗೆ ತೀರ್ಮಾನಿಸಿ ನಿರ್ಧಾರ ಕೈಗೊಂಡಿದ್ದೇವೆ ಎಂದು ಹೇಳಿದ್ದಾರೆ.