ರಾಜ್ಯದಲ್ಲಿ ಚಳಿಯ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಉತ್ತರ ಕರ್ನಾಟಕದ ಜನಜೀವನದ ಮೇಲೆ ಗಂಭೀರ ಪರಿಣಾಮ ಬೀರುತ್ತಿದೆ. ಕಳೆದ ಕೆಲವು ದಿನಗಳಿಂದ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಭಾಗಗಳಲ್ಲಿ ಶೀತಗಾಳಿ ಅಬ್ಬರಿಸುತ್ತಿದ್ದು, ಉತ್ತರ ಕರ್ನಾಟಕದ ಹಲವಾರು ಜಿಲ್ಲೆಗಳಲ್ಲಿ ತಾಪಮಾನ ಗಣನೀಯವಾಗಿ ಇಳಿಕೆಯಾಗಿದೆ.
ನಿನ್ನೆ ವಿಜಯಪುರದಲ್ಲಿ ರಾಜ್ಯದಲ್ಲೇ ಅತಿ ಕಡಿಮೆ ಉಷ್ಣಾಂಶ ದಾಖಲಾಗಿದ್ದು, ಜನರು ಚಳಿಯಿಂದ ನಡುಗುವ ಸ್ಥಿತಿ ನಿರ್ಮಾಣವಾಗಿದೆ. ಇದರ ಬೆನ್ನಲ್ಲೇ ಇಂದು ಹವಾಮಾನ ಇಲಾಖೆ ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಈ ಜಿಲ್ಲೆಗಳಲ್ಲಿ ಮುಂದಿನ ಕೆಲ ದಿನಗಳ ಕಾಲ ತೀವ್ರ ಚಳಿ ಮುಂದುವರಿಯುವ ಸಾಧ್ಯತೆ ಇದ್ದು, ಜನರು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಲಾಗಿದೆ.
ಇತ್ತ ರಾಜಧಾನಿ ಬೆಂಗಳೂರಿನಲ್ಲೂ ಬೆಳಿಗ್ಗೆ ಮತ್ತು ರಾತ್ರಿ ವೇಳೆಯಲ್ಲಿ ಮೈಕೊರೆಯುವ ಚಳಿ ಅನುಭವವಾಗುತ್ತಿದ್ದು, ಮೋಡ ಮುಸುಕಿದ ವಾತಾವರಣ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ವಿಶೇಷವಾಗಿ ವೃದ್ಧರು, ಮಕ್ಕಳು ಹಾಗೂ ಅನಾರೋಗ್ಯ ಪೀಡಿತರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಸಲಹೆ ನೀಡಲಾಗಿದೆ.








