ರೈತರ ಪಂಪ್ ಸೆಟ್ ಗಳಿಗೆ ನಿತ್ಯ 7 ಗಂಟೆ ವಿದ್ಯುತ್ ಪೂರೈಕೆಗೆ ಬದ್ಧ – ವಿ ಸುನೀಲ್ ಕುಮಾರ್
ರೈತರ ಪಂಪ್ ಸೆಟ್ ಗಳಿಗೆ ಪ್ರತಿನಿತ್ಯ 7 ಗಂಟೆ ವಿದ್ಯುತ್ ಪೂರೈಸಲು ಸರ್ಕಾರ ಬದ್ಧವಾಗಿದ್ದು, ಈ ವಿಚಾರದಲ್ಲಿ ಯಾರು ಆತಂಕಪಡುವ ಅಗತ್ಯವಿಲ್ಲ ಎಂದು ಇಂಧನ ಸಚಿವ ವಿ. ಸುನಿಲ್ ಕುಮಾರ್ ವಿಧಾನಸಭೆಯಲ್ಲಿಂದು ಹೇಳಿದ್ದಾರೆ.
ಪ್ರಶ್ನೋತ್ತರ ಕಲಾಪದಲ್ಲಿ ಸದಸ್ಯರ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, ರೈತರ ತೋಟದ ಮನೆಗಳಿಗೆ ವಿದ್ಯುತ್ ಪೂರೈಸಲಾಗುವುದು. ರೈತರ ಮಕ್ಕಳ ವಿದ್ಯಾಭ್ಯಾಸಕ್ಕೆ ಯಾವುದೇ ರೀತಿಯ ತೊಂದರೆಯಾಗದಂತೆ ಸರ್ಕಾರ ಮುನ್ನೆಚ್ಚರಿಕೆ ವಹಿಸಲಿದೆ ಎಂದು ಹೇಳಿದರು.
ಸದಸ್ಯರ ಪ್ರತ್ಯೇಕ ಪ್ರಶ್ನೆಗೆ ಉತ್ತರಿಸಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್, ಸರ್ಕಾರಿ ಶಾಲೆಗಳಲ್ಲಿ ಖಾಲಿ ಇರುವ ಶಿಕ್ಷಕರ ಹುದ್ದೆಗಳ ಭರ್ತಿಗೆ ತ್ವರಿತ ಕ್ರಮ ಕೈಗೊಳ್ಳಲಾಗುವುದು. ರಾಜ್ಯದ ಸರ್ಕಾರಿ ಶಾಲೆಗಳಲ್ಲಿ ಒಟ್ಟು 47 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇವೆ. ಈ ಪೈಕಿ 15 ಸಾವಿರ ಹುದ್ದೆಗಳ ನೇಮಕಾತಿ ಪ್ರಕ್ರಿಯೆ ಈಗಾಗಲೇ ಪ್ರಗತಿಯಲ್ಲಿದೆ. ವಿದ್ಯಾರ್ಥಿಗಳಿಗೆ ತೊಂದರೆ ಆಗುವುದನ್ನು ತಪ್ಪಿಸುವ ನಿಟ್ಟಿನಲ್ಲಿ ಪ್ರಸ್ತುತ 27 ಸಾವಿರ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಸರ್ಕಾರಿ ಪ್ರೌಢ ಶಾಲೆಗಳ ವಿವಿಧ ವೃಂದಗಳ 2 ಸಾವಿರದ 500 ಶಿಕ್ಷಕರ ಹುದ್ದೆಗಳನ್ನು ನೇರ ನೇಮಕಾತಿ ಮಾಡುವ ಮೂಲಕ ಭರ್ತಿ ಮಾಡಲು ನಿರ್ಧರಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದಲ್ಲಿ ಶಿಕ್ಷಕರ ಕೊರತೆ ನೀಗಿಸಲು ಸಹ ಈಗಾಗಲೇ ಕ್ರಮ ಕೈಗೊಂಡಿದೆ ಎಂದು ಸಚಿವರು ವಿವರಿಸಿದರು.