ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ : ಕೆ.ಎಸ್.ಈಶ್ವರಪ್ಪ
ಬೆಂಗಳೂರು : ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಪಂಚಾಯತ್ ಸಚಿವ ಕೆ.ಎಸ್.ಈಶ್ವರಪ್ಪ ಟೀಕಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಕೆ.ಎಸ್.ಈಶ್ವರಪ್ಪ, ಕಾಂಗ್ರೆಸ್ ಪಕ್ಷದಲ್ಲಿ ಜಾತಿಗೊಬ್ಬರಂತೆ ಮುಖ್ಯಮಂತ್ರಿ ಆಕಾಂಕ್ಷಿಗಳಾಗಿದ್ದಾರೆ.
ಆದರೆ ಈ ಜನ್ಮದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಕಾಂಗ್ರೆಸ್ ನಲ್ಲಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್, ಪರಮೇಶ್ವರ್, ಎಂ.ಬಿ.ಪಾಟೀಲ್, ತನ್ವೀರ್ ಸೇಠ್ ಹೀಗೆ ಹಲವರು ಮುಖ್ಯಮಂತ್ರಿ ಕನಸು ಕಾಣುತ್ತಿದ್ದಾರೆ.
ಆದರೆ ಕಾಂಗ್ರೆಸ್ ದೇಶದಲ್ಲಿ ಎಲ್ಲಿದೆ ಎಂದು ಹುಡುಕುವಂತಾಗಿದೆ ಎಂದು ಟೀಕಿಸಿದರು.
ಇದೇ ವೇಳೆ ಬಿಜೆಪಿಯಲ್ಲಿ ನಾಯಕತ್ವದ ಬದಲಾವಣೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಬಿಜೆಪಿ ಪಕ್ಷದಲ್ಲಿ ಕೆಲವರು ಭಿನ್ನ ಹೇಳಿಕೆ ಕೊಟ್ಟಿದ್ದರಿಂದ ಗೊಂದಲವಾಗಿತ್ತು.
ಉಸ್ತುವಾರಿ ಅರುಣ್ ಸಿಂಗ್ ಬಂದು ಹೋದ ನಂತರ ಎಲ್ಲವೂ ಮುಗಿದಿದೆ. ಸಿಎಂ ಯಡಿಯೂರಪ್ಪ ವರಿಷ್ಠರ ತೀರ್ಮಾನಕ್ಕೆ ಬದ್ದ ಎಂದು ಹೇಳಿದ್ದಾರೆ ಎಂದರು.
ರಮೇಶ್ ಜಾರಕಿಹೊಳಿ ರಾಜೀನಾಮೆ ಬಗ್ಗೆ ಮಾತನಾಡಿ, ರಮೇಶ್ ಜಾರಕಿಹೊಳಿ ಮನಸಿನ ಭಾವನೆ ಹೊರ ಹಾಕಿದ್ದಾರೆ. ಬಿಜೆಪಿಯಲ್ಲಿ ಹೇಳುವವರು ಕೇಳುವವರು ಇದ್ದಾರೆ.
ಬಹಿರಂಗ ಹೇಳಿಕೆ ಕೊಡುವವರ ವಿರುದ್ಧ ಕ್ರಮ ಕೈಗೊಳ್ಳಲು ಕೋರ್ ಕಮಿಟಿ ಯಲ್ಲಿ ಚರ್ಚಿಸಲಾಗಿದೆ. ಬಿಜೆಪಿಯಲ್ಲಿ ಯಾರಿಗೆ ಯಾವ ಸ್ಥಾನ ಎಂದು ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಹೇಳಿದರು.









