ಬೆಳಗಾವಿ : ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದ ಆರೋಪ ಮಾಡಿದ್ದು, ಈ ಬಗ್ಗೆ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಪ್ರತಿಕ್ರಿಯೆ ನೀಡಿ, ಕಾಂಗ್ರೆಸ್ ದೇಶದಲ್ಲಿ ಭ್ರಷ್ಟಾಚಾರದ ಜನಕ ಹಾಗೂ ಅಧಿಪತಿ. ಅಂಥದರಲ್ಲಿ ಆ ಪಕ್ಷದ ಮುಖಂಡರಾದ ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ ಸುಳ್ಳು ಆರೋಪ ಮಾಡುವ ಮೂಲಕ ಕೊಳಕು ರಾಜಕಾರಣ ಮಾಡುತ್ತಿದ್ದಾರೆ ವಾಗ್ದಾಳಿ ನಡೆಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರದ ಮೇಲೆ ಆರೋಪ ಮಾಡುತ್ತಿರೋ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ಅವರು ಭ್ರಷ್ಟಾಚಾರದ ಬಗ್ಗೆ ಮಾತನಾಡುವುದರಲ್ಲಿ ನೈತಿಕತೆ ಇಲ್ಲ. ಇಲ್ಲಸಲ್ಲದ ಆರೋಪಗಳನ್ನು ಮಾಡುವುದು ಸಿದ್ದರಾಮಯ್ಯ ಹಾಗೂ ಡಿಕೆಶಿಗೆ ಶೋಭೆ ತರುವುದಿಲ್ಲ. ಅವರಿಬ್ಬರೂ ಆತ್ಮಾವಲೋಕನ ಮಾಡಿಕೊಳ್ಳಲಿ. ಕಾಂಗ್ರೆಸ್ ನಾಯಕರು ಕೊಳಕು ರಾಜಕಾರಣ ಮಾಡುವುದನ್ನು ಬಿಡಬೇಕು. ಜನರ ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು. ದೇಶ ಹಾಗೂ ರಾಜ್ಯದ ಅಭಿವೃದ್ಧಿಗೆ ಶ್ರಮಿಸಬೇಕು ಎಂದು ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.
ದೇಶದಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡಾಗಿನಿಂದಲೂ ಯುದ್ಧದ ಪರಿಸ್ಥಿತಿ ನಿರ್ಮಾಣವಾಗಿದೆ. ಸೋಂಕಿನ ವಿರುದ್ಧ ಎಲ್ಲರೂ ಹೋರಾಡಬೇಕು. ಕೋವಿಡ್ ಮುಕ್ತ ದೇಶ ಮಾಡಲು ಪ್ರತಿಯೊಬ್ಬರೂ ಶ್ರಮಿಸಬೇಕು. ಎಲ್ಲ ರಾಜಕಾರಣಿಗಳು ಪಕ್ಷಾತೀತವಾಗಿ ಕೆಲಸ ಮಾಡಬೇಕಿದೆ. ಇಂಥ ಸ್ಥಿತಿಯಲ್ಲಿ ಕಾಂಗ್ರೆಸ್‌ನವರು ಚಿಲ್ಲರೆ ರಾಜಕಾರಣ ಮಾಡಿ ಜನರ ದಿಕ್ಕು ತಪ್ಪಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ಸುರೇಶ್ ಅಂಗಡಿ ಗರಂ ಆದರು.