ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲುವುದು ಖಚಿತ : ಎಂ.ಬಿ.ಪಾಟೀಲ್
ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರುವ ದೊಡ್ಡ ಸವಾಲು ನಮ್ಮ ಮುಂದೆ ಇದೆ. ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನ ಗೆಲ್ಲುವುದು ಖಚಿತ ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಹೇಳಿದರು.
ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರುವುದಿಲ್ಲ. ಕಾಂಗ್ರೆಸ್ನಲ್ಲಿ ಚುನಾವಣೆಗೂ ಮುನ್ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡುವ ಸಂಪ್ರದಾಯವಿಲ್ಲ. ಪಂಚ ರಾಜ್ಯಗಳ ಚುನಾವಣೆಯಲ್ಲಿ ಅನಿವಾರ್ಯವಾದ ಕಾರಣ ಪಂಜಾಬ್ನಲ್ಲಿ ಮಾತ್ರ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಮಾಡಿದ್ದರು ಎಂದು ತಿಳಿಸಿದರು.
ಅಲ್ಲದೆ ಕರ್ನಾಟಕದಲ್ಲಿ ಆ ಸನ್ನಿವೇಶ ಇಲ್ಲ. ಆದರೂ ಪಕ್ಷದ ಹೈ ಕಮಾಂಡ್ ಆ ಸಂದರ್ಭದಲ್ಲಿ ಏನು ತೀರ್ಮಾನ ಕೈಗೊಳ್ಳುತ್ತದೋ ಅದರಂತೆ ನಡೆಯುತ್ತೇವೆ. ನಮ್ಮಲ್ಲಿ ಚುನಾವಣಾ ಪೂರ್ವ ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದಿಲ್ಲ. ಪಂಜಾಬ್ ಬಿಟ್ಟು ಕಾಂಗ್ರೆಸ್ ಇತಿಹಾಸದಲ್ಲಿ ಸಿಎಂ ಅಭ್ಯರ್ಥಿ ಘೋಷಣೆ ಮಾಡಿಲ್ಲ. ಈ ಬಗ್ಗೆ ಹೈ ಕಮಾಂಡ್ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.
ಇನ್ನೂ ಮಾರ್ಚ್ 28 ರಂದು ಮಧ್ಯಾಹ್ನ 3 ಗಂಟೆಗೆ ಅರಮನೆ ಮೈದಾನದ ಗಾಯಿತ್ರಿ ವಿಹಾರದಲ್ಲಿ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಎಂ.ಬಿ.ಪಾಟೀಲ್ ಪದಗ್ರಹಣ ಮಾಡಲಿದ್ದಾರೆ. ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲ, ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ರಾಜ್ಯದ ಎಲ್ಲ ಕಾಂಗ್ರೆಸ್ ನಾಯಕರು ಭಾಗಿಯಾಗುತ್ತಾರೆ