ಕಾಂಗ್ರೆಸ್ ಮುಖಂಡ ಆಸ್ಕರ್ ಫರ್ನಾಂಡಿಸ್ ಇನ್ನಿಲ್ಲ Oscar Fernandes saaksha tv
ಬೆಂಗಳೂರು : ಕಾಂಗ್ರೆಸ್ ನ ಹಿರಿಯ ಮುಖಂಡ, ಕೇಂದ್ರದ ಮಾಜಿ ಸಚಿವ ಆಸ್ಕರ್ ಫರ್ನಾಂಡಿಸ್ ವಿಧಿವಶರಾಗಿದ್ದಾರೆ.
ಕೆಲದಿನಗಳ ಹಿಂದೆ ಯೋಗ ಮಾಡುವ ವೇಳೆ ಆಸ್ಕರ್ ಅವರು ಆಯತಪ್ಪಿ ಬಿದ್ದು, ತಲೆಗೆ ಪೆಟ್ಟು ಮಾಡಿಕೊಂಡಿದ್ದರು.
ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿತ್ತು.
ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿ, ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದರು. ಬಳಿಕ ಮಂಗಳೂರಿನ ಯೆನಪೋಯ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.
ಆಸ್ಕರ್ ಫನಾರ್ಂಡಿಸ್ ಅವರು ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.
ಅವರು ಆಸ್ಪತ್ರೆಯಲ್ಲಿದ್ದಾಗ ಎಂ.ಬಿ.ಪಾಟೀಲ್, ಎಚ್.ಕೆ.ಪಾಟೀಲ್, ಮಾಜಿ ಸಚಿವ ಜನಾರ್ದನ ಪೂಜಾರಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದರು.
ಇನ್ನು ಮಾರ್ಚ್ 27, 1941ರಲ್ಲಿ ಉಡುಪಿಯಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್ ಅವರು, 1980 ರಲ್ಲಿ ಮೊದಲ ಬಾರಿಗೆ ಉಡುಪಿ ಕ್ಷೇತ್ರದಿಂದ ಲೋಕಸಭಾ ಸದಸ್ಯರಾಗಿ ಆಯ್ಕೆಯಾಗಿದ್ದರು. ಬಳಿಕ 2013ರಂದು ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾಗಿದ್ದರು.
ಅದರಲ್ಲೂ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರ ಆಪ್ತ ವಲಯದಲ್ಲಿ ಫನಾರ್ಂಡಿಸ್ ಗುರುತಿಸಿಕೊಂಡಿದ್ದರು. ಪಕ್ಷದಲ್ಲಿ ಪ್ರಮುಖ ನಿರ್ಧಾರ ತೆಗೆದುಕೊಳ್ಳುತ್ತಿದ್ದ ಪ್ರಮುಖ ನಾಯಕರ ಪೈಕಿ ಆಸ್ಕರ್ ಫನಾರ್ಂಡಿಸ್ ಅವರು ಸಹ ಒಬ್ಬರಾಗಿದ್ದರು.