ಆಗಸ್ಟ್ 10 ರೊಳಗೆ ಸೋಂಕಿತರ ಸಂಖ್ಯೆ 20ಲಕ್ಷ ದಾಟಿದರೂ ಅಚ್ಚರಿಯಿಲ್ಲ: ರಾಹುಲ್ ಟ್ವೀಟ್
ನವದೆಹಲಿ : ಭಾರತದಲ್ಲಿ ಕೊರೊನಾ ವೈರಸ್ ಸೋಂಕಿನ ಆರ್ಭಟ ಜೋರಾಗಿದ್ದು, ಇದೀಗ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 10 ಲಕ್ಷ ದಾಟಿದೆ. ಇದರ ಮಧ್ಯೆ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರೋ ಹಿನ್ನೆಲೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಟ್ವಿಟ್ಟರ್ ನಲ್ಲಿ ಕೇಂದ್ರ ಸರ್ಕಾರಕ್ಕೆ ಎಚ್ಚರಿಕೆಯೊಂದನ್ನು ನೀಡಿದ್ದಾರೆ.
ರಾಹುಲ್ ಗಾಂಧಿ ತಮ್ಮ ಟ್ವೀಟ್ ನಲ್ಲಿ, ಈಗಾಗಲೇ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟಿದೆ. ಒಂದು ವೇಳೆ ಕೋವಿಡ್ 19 ಪ್ರಕರಣಗಳ ಪತ್ತೆ ಹೀಗೆಯೇ ಮುಂದುವರಿದರೆ ಆಗಸ್ಟ್ 10ರಳಗೆ 20 ಲಕ್ಷ ದಾಟುತ್ತದೆ ಎಂದು ಬರೆದುಕೊಂಡಿದ್ದಾರೆ. ಜೊತೆಗೆ ಕೊರೊನಾ ವೈರಸ್ ಮತ್ತಷ್ಟು ಹರಡುವುದನ್ನು ತಡೆಯಲು ಕೇಂದ್ರ ಸರ್ಕಾರ ಅಗತ್ಯ ಕ್ರಮಗಳನ್ನು ಕೂಡಲೇ ತೆಗೆದುಕೊಳ್ಳಬೇಕು ಎಂದು ತಿಳಿಸಿದ್ದಾರೆ.
ಗುರುವಾರವಷ್ಟೇ ಟ್ವೀಟ್ ಮಾಡಿದ್ದ ರಾಹುಲ್, ಇದೇ ವಾರದಲ್ಲಿ ಕೊರೊನಾ ವೈರಸ್ ಸೋಂಕಿತರ ಸಂಖ್ಯೆ 10 ಲಕ್ಷದ ಗಡಿ ದಾಟುತ್ತದೆ ಎಂದು ಹೇಳಿದ್ದರು. ಅಂತೆಯೇ ಇಂದು ದೇಶದಾದ್ಯಂತ ಒಟ್ಟು ಸೋಂಕಿತರ ಸಂಖ್ಯೆ 10 ಲಕ್ಷ ದಾಟಿದೆ








