ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿ ವಿರುದ್ಧ ದೊಡ್ಡ ತಿರುವು ಕಂಡುಬಂದಿದೆ. ಸೆಪ್ಟೆಂಬರ್ 22ರವರೆಗೆ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಂದು ಬೆಳಿಗ್ಗೆ ವೀರೇಂದ್ರ ಪಪ್ಪಿಯನ್ನು ಜಾರಿ ನಿರ್ದೇಶನಾಲಯದ (ED) ಅಧಿಕಾರಿಗಳು ಕೋರ್ಟ್ ಮುಂದೆ ಹಾಜರುಪಡಿಸಿದ್ದರು. ಈ ವೇಳೆ ED ಅಧಿಕಾರಿಗಳು ಕಸ್ಟಡಿಗೆ ಬೇಡಿಕೆಯನ್ನು ಇಟ್ಟರು. ಹೀಗಾಗಿ, ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ.
ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ವೀರೇಂದ್ರ ಪಪ್ಪಿಯ ಹೆಸರು ಮುಂಚಿನಿಂದಲೇ ಚರ್ಚೆಗೆ ಗ್ರಾಸವಾಗಿತ್ತು. ED ತನಿಖೆ ಹಿನ್ನೆಲೆಯಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಲಾಗಿತ್ತು. ಇದೀಗ ಕೋರ್ಟ್ ಆದೇಶದ ಪ್ರಕಾರ ಅವರು ನ್ಯಾಯಾಂಗ ಬಂಧನದಲ್ಲಿದ್ದಾರೆ.
ಈ ಬೆಳವಣಿಗೆ ಕಾಂಗ್ರೆಸ್ ಪಕ್ಷಕ್ಕೂ, ರಾಜ್ಯ ರಾಜಕೀಯಕ್ಕೂ ದೊಡ್ಡ ಸವಾಲಾಗಿ ಪರಿಣಮಿಸಿದೆ. ವೀರೇಂದ್ರ ಪಪ್ಪಿ ಬಂಧನದ ವಿಚಾರದಲ್ಲಿ ಮುಂದಿನ ದಿನಗಳಲ್ಲಿ ಯಾವ ತಿರುವು ಸಿಗುತ್ತದೆ ಎನ್ನುವುದು ಕುತೂಹಲ ಮೂಡಿಸಿದೆ.







