ಬೆಂಗಳೂರು : ಭೂ ಸುಧಾರಣಾ ಕಾಯ್ದೆ, ಕಾರ್ಮಿಕ ಕಾಯ್ದೆ ಹಾಗೂ ಎಪಿಎಂಸಿ ಕಾಯ್ದೆಗಳಿಗೆ ತಿದ್ದುಪಡಿ ವಿರೋಧಿಸಿ ರಾಜ್ಯ ಸರ್ಕಾರದ ವಿರುದ್ಧ ರಾಜ್ಯ ಕಾಂಗ್ರೆಸ್ ಜನಧ್ವನಿ ಹೆಸರಲ್ಲಿ ಇಂದು ಪ್ರತಿಭಟನೆ ನಡೆಸಿತು.
ಬೆಂಗಳೂರಿನ ರೇಸ್ ಕೋರ್ಸ್ ರಸ್ತೆಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಜನಧ್ವನಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮ ದಿನಾಚರಣೆ ಹಾಗೂ ಮಾಜಿ ಮುಖ್ಯಮಂತ್ರಿ ದೇವರಾಜ ಅರಸು ಅವರ ಜನ್ಮದಿನಾಚರಣೆ ಹಿನ್ನಲೆಯಲ್ಲಿ ಅವರ ಭಾವಚಿತ್ರಕ್ಕೆ ಕಾಂಗ್ರೆಸ್ ನಾಯಕರು ಪುಷ್ಪಾರ್ಚನೆ ಮಾಡಿದರು.
ಬಳಿಕ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಕಾಂಗ್ರೆಸ್ ಭವನದ ಮುಂಭಾಗ ಧರಣಿ ಆರಂಭವಾಯಿತು. ಇದಕ್ಕೆ ಹೋಂ ಕ್ವಾರಂಟೀನ್ ಆಗಿರುವ ಸಿದ್ದರಾಮಯ್ಯ ಗೈರಾಗಿದ್ದರು. ಇನ್ನುಳಿದಂತೆ ಕಾಂಗ್ರೆಸ್ ನ ಎಲ್ಲ ನಾಯಕರು ಇದರಲ್ಲಿ ಭಾಗಿಯಾಗಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.









