ಕಾಂಗ್ರೆಸ್ ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಅನ್ನು ಸಂಪೂರ್ಣವಾಗಿ ಹಾಡುವುದಿಲ್ಲ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಹಾಗೂ ಕೆಪಿಸಿಸಿ ನಾಯಕ ಬಿ.ಕೆ. ಹರಿಪ್ರಸಾದ್ ಸ್ಪಷ್ಟಪಡಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಕಾರ್ಯಕ್ರಮಗಳಲ್ಲಿ ‘ವಂದೇ ಮಾತರಂ’ನ ಮೊದಲ ಎರಡು ಪ್ಯಾರಾಗಳನ್ನು ಮಾತ್ರ ಹಾಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಈ ನಿಲುವಿನಿಂದ ಯಾವುದೇ ಕಾರಣಕ್ಕೂ ಹಿಂದೆ ಸರಿಯುವುದಿಲ್ಲ ಎಂದು ಖಡಕ್ ಆಗಿ ಹೇಳಿದ ಹರಿಪ್ರಸಾದ್, ನೇಣಿಗೇರಿಸಿದರೂ, ಜೈಲಿಗೆ ಹಾಕಿದರೂ ನಮ್ಮ ನಿಲುವು ಬದಲಾಗುವುದಿಲ್ಲ ಎಂದು ಹೇಳಿದ್ದಾರೆ.
ದೇಶದ ಸ್ವಾತಂತ್ರ್ಯಕ್ಕಾಗಿ ತಮ್ಮ ಪೂರ್ವಜರು ಮಾಡಿದ ತ್ಯಾಗ ಮತ್ತು ಬಲಿದಾನವನ್ನು ಸ್ಮರಿಸಿದ ಅವರು, ರಾಷ್ಟ್ರಗೀತೆ ‘ಜನ ಗಣ ಮನ’ ಹಾಗೂ ರಾಷ್ಟ್ರೀಯ ಗೀತೆ ‘ವಂದೇ ಮಾತರಂ’ ಎರಡನ್ನೂ ಕಾಂಗ್ರೆಸ್ ಗೌರವಿಸುತ್ತದೆ ಎಂದು ಹೇಳಿದರು.
ಆದರೆ, ‘ವಂದೇ ಮಾತರಂ’ ಗಾಯನದ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಹಿಂದಿನಿಂದಲೂ ಅನುಸರಿಸಿಕೊಂಡು ಬಂದಿರುವ ಪರಂಪರೆಯಂತೆ ಮೊದಲ ಎರಡು ಪ್ಯಾರಾಗಳನ್ನು ಮಾತ್ರ ಹಾಡಲು ನಿರ್ಧರಿಸಲಾಗಿದೆ ಎಂದು ಹರಿಪ್ರಸಾದ್ ತಮ್ಮ ನಿಲುವನ್ನು ಸಮರ್ಥಿಸಿಕೊಂಡಿದ್ದಾರೆ.
ಹರಿಪ್ರಸಾದ್ ಅವರ ಈ ಹೇಳಿಕೆ ಇದೀಗ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ‘ವಂದೇ ಮಾತರಂ’ ವಿಚಾರದಲ್ಲಿ ಮತ್ತೊಂದು ರಾಜಕೀಯ ವಾಗ್ವಾದಕ್ಕೆ ವೇದಿಕೆಯಾಗುವ ಸಾಧ್ಯತೆ ಇದೆ.








