ಭಾರತೀಯ ಸೇನೆ ನಡೆಸಿದ ‘ಆಪರೇಷನ್ ಸಿಂಧೂರ’ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕರ್ನಲ್ ಸೋಫಿಯಾ ಖುರೇಷಿ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ, ಮಧ್ಯಪ್ರದೇಶದ ಅರಣ್ಯ ಸಚಿವ ಮತ್ತು ಬಿಜೆಪಿ ನಾಯಕ ಕನ್ವರ್ ವಿಜಯ್ ಶಾ ವಿರುದ್ಧ ಎಫ್‌ಐಆರ್ ದಾಖಲಿಸುವಂತೆ ಹೈಕೋರ್ಟ್ ಆದೇಶ ನೀಡಿದೆ.
ಈ ಸಂಬಂಧ ನ್ಯಾಯಮೂರ್ತಿ ಅತುಲ್ ಶ್ರೀಧರನ್ ಅವರಿದ್ದ ಏಕಸದಸ್ಯ ಪೀಠದಿಂದ ಆದೇಶ ಹೊರಬಿದ್ದಿದ್ದು, ಈ ಆದೇಶವನ್ನು ಪಾಲಿಸಲು ವಿಫಲವಾದರೆ, ರಾಜ್ಯದ ಪೊಲೀಸ್ ಮಹಾನಿರ್ದೇಶಕರ ವಿರುದ್ಧ ನ್ಯಾಯಾಂಗ ನಿಂದನೆ ಪ್ರಕರಣವನ್ನು ಮುಂದುವರೆಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಕೂಡ ನೀಡಲಾಗಿದೆ.
ಇತ್ತೀಚೆಗೆ ಮಹಿಳಾ ಸೇನಾಧಿಕಾರಿ ಕರ್ನಲ್ ಸೋಫಿಯಾ ಖುರೇಷಿ ಅವರು ಆಪರೇಷನ್ ಸಿಂಧೂರ ಕುರಿತು ಮಾಧ್ಯಮಗಳಲ್ಲಿ ಮಾತನಾಡಿದ ಬಳಿಕ, ಅವರ ಕುರಿತಾಗಿ ಸಚಿವ ವಿಜಯ್ ಶಾ ವಿವಾದಾತ್ಮಕ ಹೇಳಿಕೆ ನೀಡಿದ್ದರು. ಇದರಿಂದ ಆಫೀಸರ್ ಮಾನಹಾನಿಗೆ ಒಳಗಾಗಿದ್ದಾರೆ ಎಂಬ ಆರೋಪ ಕೇಳಿ ಬಂತು.
ಈ ಕುರಿತು ಸಲ್ಲಿಸಲಾದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯವು ಸಚಿವರ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಿದ್ದು, ಅವರನ್ನು ತನಿಖೆಗೆ ಒಳಪಡಿಸಬೇಕು ಮತ್ತು ಸೂಕ್ತ ಎಫ್‌ಐಆರ್ ದಾಖಲಾಗಬೇಕು ಎಂಬ ಸ್ಪಷ್ಟ ಸೂಚನೆ ನೀಡಿದೆ.
ಅದನ್ನು ನಿರ್ಲಕ್ಷಿಸಿದರೆ, ಕಾನೂನಿನ ಪ್ರಕಾರ ನ್ಯಾಯಾಂಗ ನಿಂದನೆ ಕಾಯ್ದೆಯಡಿಯಲ್ಲಿ ಡಿಜಿಪಿ ವಿರುದ್ಧ ಕ್ರಮ ಕೈಗೊಳ್ಳುವುದು ಅನಿವಾರ್ಯವಾಗುತ್ತದೆ ಎಂದು ನ್ಯಾಯಮೂರ್ತಿ ಸ್ಪಷ್ಟಪಡಿಸಿದ್ದಾರೆ.
ಈ ಬೆಳವಣಿಗೆ ರಾಜಕೀಯ ವಲಯದಲ್ಲಿಯೂ ಚರ್ಚೆಗೆ ಕಾರಣವಾಗಿದ್ದು, ಮುಂದಿನ ದಿನಗಳಲ್ಲಿ ಈ ಪ್ರಕರಣದ ಬಗ್ಗೆ ಇನ್ನಷ್ಟು ಪ್ರಗತಿ ಕಂಡುಬರುವ ನಿರೀಕ್ಷೆಯಿದೆ.








