ಬೆಂಗಳೂರು, ಮೇ 19: ಕೊರೋನಾ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ರಾಜ್ಯವು ಮಾದರಿಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ.ಕೆ.ಸುಧಾಕರ್ ಅವರು ತಿಳಿಸಿದ್ದಾರೆ.
ಕೊರೋನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದಲ್ಲಿ ಎಲ್ಲರ ಮೇಲೂ ನಿಗಾ ವಹಿಸಿದ್ದು, ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
ದೇಶದ ಇತರ ರಾಜ್ಯಗಳಲ್ಲಿ ಕೊರೊನಾ ಸೋಂಕಿತ ಪ್ರಕರಣಗಳ ಸಂಖ್ಯೆ ಏರಿಕೆಯಾಗುತ್ತಿದ್ದು, ಬೇರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ನಮ್ಮ ರಾಜ್ಯಗಳಲ್ಲಿ ಸೋಂಕಿತರ ಸಂಖ್ಯೆ ಕಡಿಮೆ ಇದೆ ಎಂದ ಅವರು ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣದಲ್ಲಿ ಇದೆ ಎಂದರು.
ಲಾಕ್ ಡೌನ್ ಸಡಿಲಿಕೆ ವಿಚಾರವಾಗಿ ಮಾತನಾಡಿದ ಅವರು ರಾಜ್ಯದಲ್ಲಿ ಲಾಕ್ ಡೌನ್ ಸಡಿಲಿಕೆ ಮಾಡಲಾಗುತ್ತಿದ್ದು ಬಸ್, ರೈಲು ಸಂಚಾರಕ್ಕೆ ಅನುವು ಮಾಡಿಕೊಡಲಾಗುತ್ತಿದೆ. ಎಲ್ಲಿ ಕೊರೊನಾ ಪ್ರಕರಣಗಳು ಇರುತ್ತದೆಯೋ ಆ ಪ್ರದೇಶವನ್ನು ಕಂಟೈನ್ಮೆಂಟ್ ವಲಯ ಎಂದು ಗುರುತಿಸಿ, 100 ಮೀಟರ್ ವ್ಯಾಪ್ತಿಯಲ್ಲಿ ಸೀಲ್ ಡೌನ್ ಮಾಡಲಾಗುವುದು ಎಂದು ಹೇಳಿದರು.
ಮುಂದಿನ ದಿನಗಳಲ್ಲಿ ನಗರ, ಗ್ರಾಮೀಣ ಭಾಗಗಳನ್ನು ದೃಷ್ಟಿಯಲ್ಲಿಟ್ಟುಕೊಂಡು ಕೆಲವು ಹೊಸ ಬದಲಾವಣೆಗಳನ್ನು ಮಾಡಲಾಗುವುದು ಎಂದ ಸಚಿವರು ಇನ್ನೊಂದೆರಡು ದಿನಗಳಲ್ಲಿ ಹೊಸ ಮಾರ್ಗಸೂಚಿಯನ್ನು ಪ್ರಕಟಿಸಲಾಗುವುದು ಎಂದರು.
ಪ್ರತಿಯೊಂದನ್ನು ಸರ್ಕಾರವೇ ಮಾಡಲು ಸಾಧ್ಯವಿಲ್ಲ ಎಂದ ಸಚಿವ ಡಾ.ಕೆ.ಸುಧಾಕರ್ ಸಾರ್ವಜನಿಕರು ಕೂಡಾ ತಮ್ಮ ಜವಾಬ್ದಾರಿ ನಿಭಾಯಿಸಬೇಕು. ಅವರ ಜವಾಬ್ದಾರಿ ಇದರಲ್ಲಿ ಹೆಚ್ಚಿನದು ಎಂದರು.