ಆಂಫಾನ್ ಚಂಡಮಾರುತದ ವಿರುದ್ಧ ಹೋರಾಡಿದ 50 ಎನ್ಡಿಆರ್ಎಫ್ ಸಿಬ್ಬಂದಿಗಳಿಗೆ ಕೊರೊನಾ ಸೋಂಕು
ಕಟಕ್, ಜೂನ್ 9: ಪಶ್ಚಿಮ ಬಂಗಾಳ ರಾಜ್ಯಕ್ಕೆ ಅಂಫಾನ್ ಚಂಡಮಾರುತ ಅಪ್ಪಳಿಸಿದ ಸಮಯದಲ್ಲಿ ರಕ್ಷಣಾ ಕಾರ್ಯದಲ್ಲಿ ನಿರತರಾಗಿದ್ದ 50 ಜನ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಸಿಬ್ಬಂದಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.
ಒಡಿಶಾದ ಕಟಕ್ನಲ್ಲಿ 3ನೇ ಬೆಟಾಲಿಯನ್ನಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ 190 ಮಂದಿ ಸಿಬ್ಬಂದಿಗಳನ್ನು ಅಂಫಾನ್ ಚಂಡಮಾರುತದ ಸಂದರ್ಭದಲ್ಲಿ ಪಶ್ಚಿಮ ಬಂಗಾಳಕ್ಕೆ ರಕ್ಷಣಾ ಕಾರ್ಯಕ್ಕಾಗಿ ಕಳುಹಿಸಿ ಕೊಡಲಾಗಿತ್ತು. ಅಲ್ಲಿಂದ ವಾಪಸ್ ಬಂದ ಬಳಿಕ ಅವರನ್ನು ಕೊರೋನಾ ಸೋಂಕಿನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಅವರಲ್ಲಿ 50 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ತಂಡದ ಮುಖ್ಯಸ್ಥ ಎಸ್.ಎನ್ ಪ್ರಧಾನ್ ಅವರು ಈ ಬಗ್ಗೆ ಮಾಹಿತಿ ನೀಡಿದ್ದು ಅಂಫಾನ್ ಚಂಡಮಾರುತ ಸಮಯದಲ್ಲಿ ಪಶ್ಚಿಮ ಬಂಗಾಳ ಹಾಗೂ ಒಡಿಶಾದಲ್ಲಿ ಕರ್ತವ್ಯ ನಿರತರಾಗಿದ್ದ 50 ಸಿಬ್ಬಂದಿಗೆ ಕೊರೋನಾ ಸೋಂಕು ತಗುಲಿದೆ ಎಂದು ಮಾಹಿತಿ ನೀಡಿದ್ದಾರೆ. ಅವರನ್ನೆಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಆದರೆ 50 ಮಂದಿ ಸಿಬ್ಬಂದಿಯಲ್ಲಿ ಯಾವುದೇ ಕೊರೊನಾದ ಲಕ್ಷಣಗಳು ಕಾಣಿಸಿಕೊಂಡಿಲ್ಲ ಎಂದು ಹೇಳಿದ್ದಾರೆ.
ಇದೇ ವೇಳೆ ದೆಹಲಿಯಲ್ಲಿರುವ ಎನ್.ಡಿ.ಆರ್.ಎಫ್ ನ 26 ಸಿಬ್ಬಂದಿಗಳಲ್ಲೂ ಕೊರೋನಾ ಸೋಂಕು ಕಾಣಿಸಿಕೊಂಡಿದ್ದು, ಇದರೊಂದಿಗೆ ಒಟ್ಟಾರೆ 76 ಮಂದಿ ಸಿಬ್ಬಂದಿಗಳು ಸೋಂಕಿಗೆ ತುತ್ತಾಗಿದ್ದಾರೆ.