ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಕೊರೊನಾ ಸೋಂಕು ಪ್ರಕರಣ ಬೆಳಕಿಗೆ ಬಂದಿದೆ. ಗ್ರೀಸ್ ನಿಂದ ಬಂದ 26 ವರ್ಷದ ಯುವಕನಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ.
ಗ್ರೀಸ್ ನಿಂದ ಬಂದಿದ್ದ ವ್ಯಕ್ತಿಯಲ್ಲಿ ತಪಾಸಣೆ ವೇಳೆ ಕೊರೊನಾ ಲಕ್ಷಣ ಕಂಡುಬಂದಿತ್ತು. ಈ ಹಿನ್ನೆಲೆಯಲ್ಲಿ ಅವರ ರಕ್ತದ ಮಾದರಿ ಹಾಗೂ ಕಫದ ಸ್ಯಾಂಪಲ್ ನ್ನು ವೈದ್ಯಕೀಯ ತಪಾಸಣೆಗೆ ರವಾನಿಸಲಾಗಿತ್ತು. ಇಂದು ವೈದ್ಯಕೀಯ ವರದಿ ಬಂದಿದ್ದು, ಈ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಆ ವ್ಯಕ್ತಿಯನ್ನು ಸರ್ಕಾರಿ ಆಸ್ಪತ್ರೆಗೆ ರವಾನಿಸಿ ಪ್ರತ್ಯೇಕ ವಾರ್ಡ್ ನಲ್ಲಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೆ ಆ ವ್ಯಕ್ತಿಯ ಸಂಪರ್ಕದಲ್ಲಿದ್ದ ಎಲ್ಲರನ್ನು ಗುರುತಿಸಿ ಅವರೆಲ್ಲರಿಗೂ ತಪಾಸಣೆ ನಡೆಸಲಾಗಿದೆ. ಈ ವೇಳೆ, ಎಲ್ಲರ ವರದಿಯಲ್ಲಿ ನೆಗೆಟಿವ್ ಬಂದಿದೆ ಎನ್ನಲಾಗಿದೆ. ಈಗಾಗಲೇ ಬೆಂಗಳೂರಿನಲ್ಲಿ ನಾಲ್ವರಲ್ಲಿ ಸೋಂಕು ದೃಢಪಟ್ಟಿದ್ದು, ಅವರನ್ನು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.