ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ರಾಜ್ಯದಾದ್ಯಂತ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈ ಮಧ್ಯೆ ಮಾಜಿ ಸಿಎಂ ಕುಮಾರಸ್ವಾಮಿ ಅವರು ಸರ್ಕಾರಕ್ಕೆ ಕೆಲ ಸಲಹೆಗಳನ್ನು ನೀಡಿದ್ದಾರೆ.
ಈ ಬಗ್ಗೆ ಸರಣಿ ಟ್ವೀಟ್ ಗಳನ್ನು ಮಾಡಿರುವ ಅವರು, ರಾಜ್ಯದ ಯಾವುದೇ ಎಟಿಎಮ್ ನಲ್ಲೂ ಸುರಕ್ಷೆ ಇಲ್ಲ . ದಿನನಿತ್ಯ ಹಣ ಡ್ರಾ ಮಾಡಲು ನೂರಾರು ಗ್ರಾಹಕರು ಎಟಿಎಮ್ ಗಳಿಗೆ ಬರ್ತಾರೆ. ಕೊರೊನಾ ವೈರಸ್ ಬಗ್ಗೆ ಮುಂಜಾಗ್ರತಾ ಕ್ರಮ ತಕ್ಷಣವೇ ತೆಗೆದುಕೊಳ್ಳಬೇಕು. ಪ್ರತಿ ಎಟಿಎಂ ಕೇಂದ್ರಗಳಲ್ಲಿ ಹ್ಯಾಂಡ್ ಸ್ಯಾನಿಟೈಸರ್ ಕಡ್ಡಾಯವಾಗಿ ಇಡಲು ತುರ್ತು ಕ್ರಮ ಕೈಗೊಳ್ಳ ಬೇಕು ಎಂದು ಒತ್ತಾಯಿಸಿದ್ದಾರೆ. ದುರಾದೃಷ್ಟವಶಾತ್ ಕೊರೊನಾ ಸೋಂಕಿತರು ಹಣ ಡ್ರಾ ಮಾಡಿದರೆ ಅಮಾಯಕರು ಕೊರೊನಾಗೆ ಬಲಿ ಆಗುವ ಸಾಧ್ಯತೆಗಳಿವೆ. ಎಲ್ಲ ಬ್ಯಾಂಕ್ ಗಳು ತುರ್ತಾಗಿ ಎಟಿಎಂಗಳಲ್ಲಿ ಸಮರೋಪಾದಿಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಸರ್ಕಾರ ಈ ಬಗ್ಗೆ ಸ್ಪಷ್ಟ ನಿರ್ದೇಶನ ನೀಡಬೇಕು ಎಂದು ಟ್ವೀಟ್ ಮೂಲಕ ಹೆಚ್ ಡಿಕೆ ಆಗ್ರಹಿಸಿದ್ದಾರೆ.
ವಿಧಾನಮಂಡಲ ಅಧಿವೇಶನ ಮುಂದೂಡುವಂತೆ ಆಗ್ರಹ
ರಾಜ್ಯದಲ್ಲಿ ಕೊರೊನಾ ಸೋಂಕು ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆ ಸರ್ಕಾರಕ್ಕೆ ವಿಧಾನಮಂಡಲ ಅಧಿವೇಶನವನ್ನು ಮುಂದೂಡುವಂತೆ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಕೊರೊನಾ ವೈರಸ್ ತಡೆಗಟ್ಟುವ ನಿಟ್ಟಿನಲ್ಲಿ ಸ್ವಯಂ ನಿರ್ಬಂಧಗಳನ್ನು ಪಾಲಿಸುವಂತೆ ಜನತೆಗೆ ಹೇಳುತ್ತಿರುವ ಸರ್ಕಾರ ತಕ್ಷಣವೇ ವಿಧಾನಮಂಡಲ ಅಧಿವೇಶನವನ್ನು ಮುಂದೂಡಬೇಕು. ನೂರಾರು ಮಂದಿ ಒಂದೆಡೆ ಸೇರಬಾರದು ಎಂದು ತಾಕೀತು ಮಾಡುವ ಸರ್ಕಾರ.. ನೂರಾರು ಜನಪ್ರತಿನಿಧಿಗಳು, ಅಧಿಕಾರಿಗಳು, ಪತ್ರಕರ್ತರು ಹಾಗೂ ಜನರು ಜಮಾಯಿಸುವ ಅಧಿವೇಶನ ನಡೆಸುವುದು ವಾಸ್ತವ ಪರಿಸ್ಥಿತಿಯಲ್ಲಿ ಸರಿಯಲ್ಲ ಎಂದಿದ್ದಾರೆ.









