ರಾಜ್ಯದಲ್ಲಿ ಲಾಕ್ ಡೌನ್, ಸೆಮಿ ಲಾಕ್ ಡೌನ್ ಬಗ್ಗೆ ಸುಧಾಕರ್ ಸ್ಪಷ್ಟನೆ
ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಲಾಕ್ ಡೌನ್ ಮಾಡುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಮಧ್ಯೆ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಸೆಮಿ ಲಾಕ್ ಡೌನ್ ಇಲ್ಲ ಎಂದು ಸಚಿವ ಕೆ. ಸುಧಾಕರ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಲಾಕ್ ಡೌನ್ ಅಥವಾ ಸೆಮಿ ಲಾಕ್ ಡೌನ್ ಇಲ್ಲ. ಪರಿಸ್ಥಿತಿಗಳನ್ನು ಅವಲೋಕನ ಮಾಡಿ ಕೆಲವೊಂದು ನಿರ್ಣಯಗಳನ್ನು ನಿನ್ನೆ ಪ್ರಸ್ತಾಪ ಮಾಡಿದ್ದಾರೆ. ಮಹಾರಾಷ್ಟ್ರ ಹಾಗೂ ಕೇರಳ ಗಡಿ ಭಾಗಗಳಿಂದ ಬರುವ ಜನರ ಮೇಲೆ ಕಠಿಣ ಕ್ರಮ ಕೈಗೊಳ್ಳುವಂತೆ ತಿಳಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಬಹಳಷ್ಟು ಮಂದಿ ಮಾಸ್ಕ್ ಧರಿಸದೇ ಓಡಾಡುತ್ತಿದ್ದಾರೆ. ಹೀಗಾಗಿ ಮಾಸ್ಕ್ ಇಲ್ಲದೆ ಓಡಾಡುವವರಿಗೆ 250 ದಂಡ ವಿಧಿಸುವ ಕ್ರಮವನ್ನು ಎರಡು ದಿನಗಳೊಳಗೆ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇದೇ ವೇಳೆ ಮದುವೆ ಸಮಾರಂಭಗಳಲ್ಲಿ ನಿಗದಿಯಾದ ಮಿತಿಗಿಂತ ಜನ ಸೇರುವಂತಿಲ್ಲ. ಒಂದು ವೇಳೆ ಈ ರೂಲ್ಸ್ ಪಾಲೋ ಮಾಡದಿದ್ದರೆ ಮಾರ್ಷಲ್ ಗಳನ್ನು ಕಳುಹಿಸಲಾಗುವುದು ಎಂದು ಸುಧಾಕರ್ ತಿಳಿಸಿದ್ದಾರೆ.










