ಬೆಂಗಳೂರು ನಗರಕ್ಕಷ್ಟೆ ಅಲ್ಲದೇ ಗ್ರಾಮಗಳತ್ತ ಗಮನಹರಿಸಿ : ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

1 min read
siddaramaiah

ಬೆಂಗಳೂರು ನಗರಕ್ಕಷ್ಟೆ ಅಲ್ಲದೇ ಗ್ರಾಮಗಳತ್ತ ಗಮನಹರಿಸಿ : ಸರ್ಕಾರಕ್ಕೆ ಸಿದ್ದರಾಮಯ್ಯ ಚಾಟಿ

ಬೆಂಗಳೂರು : ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಸಲಹೆ ನೀಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅವರು, ಕೊರೊನಾ ಸೋಂಕು ತ್ವರಿತ ಗತಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಹರಡುತ್ತಿರುವುದು ಆಘಾತಕಾರಿ ಬೆಳವಣಿಗೆ. ರಾಜ್ಯದಲ್ಲಿ ಈಗಿನ ಶೇಕಡಾ 55ರಷ್ಟು ಸೋಂಕಿನ ಪ್ರಕರಣಗಳು ಗ್ರಾಮೀಣ ಪ್ರದೇಶದಿಂದ ವರದಿಯಾಗುತ್ತಿರುವುದನ್ನು ತಜ್ಞರು ಗುರುತಿಸಿದ್ದಾರೆ. ತಿಂಗಳ ಹಿಂದೆ ಈ ಪ್ರಮಾಣ ಶೇಕಡಾ 30 ರಷ್ಟಿತ್ತು.

ರಾಜ್ಯ ಬಿಜೆಪಿ ಸರ್ಕಾರ ಬೆಂಗಳೂರು ನಗರಕ್ಕಷ್ಟೇ ಸೀಮಿತವಾಗದೆ ಜಿಲ್ಲೆ, ತಾಲೂಕು, ಗ್ರಾಮಗಳ ಕಡೆ ಗಮನಹರಿಸಬೇಕಾಗಿದೆ. ಈಗಲೂ ಕಾಲ ಮಿಂಚಿಲ್ಲ, ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಗ್ರಾಮೀಣ ಪ್ರದೇಶದ ಆಸ್ಪತ್ರೆಗಳಲ್ಲಿ ಹಾಸಿಗೆ, ಆಮ್ಲಜನಕ, ಐಸಿಯು, ವೆಂಟಿಲೇಟರ್ ಮತ್ತು ವೈದ್ಯಕೀಯ ಸಿಬ್ಬಂದಿಯ ವ್ಯವಸ್ಥೆಯನ್ನು ಬಲಪಡಿಸಬೇಕು.

ಜಿಲ್ಲೆಗಳಲ್ಲಿ ಕೊರೊನಾ ಚಿಕಿತ್ಸೆ ಮತ್ತು ನಿಯಂತ್ರಣ ವ್ಯವಸ್ಥೆಯ ಹೊಣೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಿಗೆ ವಹಿಸಿಕೊಡಬೇಕು. ಉಸ್ತುವಾರಿ ಸಚಿವರು ಜಿಲ್ಲೆಯಲ್ಲಿಯೇ ಮೊಕ್ಕಾಂ ಹೂಡಿ ಮೇಲ್ವಿಚಾರಣೆ ನಡೆಸುವಂತೆ ರಾಜ್ಯ ಬಿಜೆಪಿ ಸರ್ಕಾರ ಅವರಿಗೆ ತಾಕೀತು ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

bangalore

ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿ ಜಿಲ್ಲಾ ಮಟ್ಟದಲ್ಲಿ ಅನುಸರಿಸಲಾಗಿದ್ದ ಸುರಕ್ಷತಾ ಕ್ರಮಗಳನ್ನು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸರ್ಕಾರ ಮತ್ತು ಜಿಲ್ಲಾಡಳಿತ ಸಂಪೂರ್ಣವಾಗಿ ನಿರ್ಲಕ್ಷಿಸಿರುವುದು ಕೂಡಾ ಗ್ರಾಮೀಣ ಪ್ರದೇಶಗಳಲ್ಲಿ ಕೊರೊನಾ ಸೋಂಕು ಉಲ್ಭಣಗೊಳ್ಳಲು ಕಾರಣ ಎಂದು ಆರೋಪಿಸಿದ್ದಾರೆ.

ಕಳೆದೆರಡು ತಿಂಗಳ ಅವಧಿಯಲ್ಲಿ ಹೆಚ್ಚು ಸೋಂಕಿನ ಪ್ರಕರಣಗಳಿದ್ದ ಮಹಾರಾಷ್ಟ್ರ ಸೇರಿದಂತೆ ಬೇರೆ ರಾಜ್ಯಗಳಿಂದ ಜನ ಯಾವುದೇ ತಪಾಸಣೆಯಿಲ್ಲದೆ ಇಲ್ಲಿಗೆ ಬಂದಿದ್ದಾರೆ. ಬೆಂಗಳೂರಿನ ಸ್ಥಿತಿ ಬಿಗಡಾಯಿಸಿದ ನಂತರ ಅಲ್ಲಿಂದಲೂ ಜನ ಹಿಂಡುಗಟ್ಟಿಕೊಂಡು ಜಿಲ್ಲೆಗಳಿಗೆ ತೆರಳಿದ್ದಾರೆ. ಅಂತರರಾಜ್ಯ ಮಾತ್ರವಲ್ಲ ಅಂತರಜಿಲ್ಲಾ ಸಂಚಾರವನ್ನು ನಿಬರ್ಂಧಿಸಬೇಕು ಎಂದು ಒತ್ತಾಯಿಸಿದ್ದಾರೆ.

ಬೆಂಗಳೂರು ನಗರಕ್ಕೆ ಹೋಲಿಸಿದರೆ ಜಿಲ್ಲೆಗಳಲ್ಲಿ ವೈದ್ಯಕೀಯ ಚಿಕಿತ್ಸಾ ವ್ಯವಸ್ಥೆಯ ತೀವ್ರ ಕೊರತೆಯಿರುವುದು ಕೊರೊನಾ ಮೊದಲ ಅಲೆಯ ಸಂದರ್ಭದಲ್ಲಿಯೇ ಜಗಜ್ಜಾಹೀರಾಗಿದೆ. 25 ಅಮಾಯಕರನ್ನು ಬಲಿ ತೆಗೆದುಕೊಂಡ ಚಾಮರಾಜನಗರ ಜಿಲ್ಲೆಯ ದುರಂತ ಘಟನೆಯ ನಂತರವೂ ರಾಜ್ಯ ಬಿಜೆಪಿ ಸರ್ಕಾರ ಎಚ್ಚೆತ್ತುಕೊಂಡಿಲ್ಲ ಎಂದು ಬೇಸರ ಹೊರಹಾಕಿದ್ದಾರೆ.

Leave a Reply

Your email address will not be published. Required fields are marked *

YOU MUST READ

Copyright © All rights reserved | SaakshaTV | JustInit DigiTech Pvt Ltd