ಕೊರೊನಾ ತಡೆಗೆ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ : ಬೊಮ್ಮಾಯಿ
ಬೆಂಗಳೂರು : ರಾಜ್ಯದಲ್ಲಿ ಹೆಚ್ಚಾಗುತ್ತಿರುವ ಕೊರೊನಾ ಸೋಂಕನ್ನು ತಡೆಗಟ್ಟಲು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚಳ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಕೊರೋನಾ ಸೋಂಕು ತಡೆಗಟ್ಟಲು ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಕೇರಳ ಗಡಿ ಹಂಚಿಕೊಂಡಿರುವ ಜಿಲ್ಲೆಗಳಾದ ದಕ್ಷಿಣ ಕನ್ನಡ, ಕೊಡಗು, ಚಾಮರಾಜನಗರ, ಮೈಸೂರು ಭಾಗಗಳಲ್ಲಿ ವ್ಯಾಪಕ ನಿಗಾ ವಹಿಸಲು ಸೂಚಿಸಲಾಗಿದೆ. ಕೇರಳದಿಂದ ರಾಜ್ಯಕ್ಕೆ ಬರುವವರು ಕಡ್ಡಾಯವಾಗಿ ಎರಡು ಡೋಸ್ ಲಸಿಕೆ ಪಡೆದಿರಬೇಕು, ಆರ್ ಟಿಪಿಸಿಆರ್ ನೆಗೆಟಿವ್ ವರದಿ ಇದ್ದರೆ ಮಾತ್ರ ರಾಜ್ಯ ಪ್ರವೇಶಕ್ಕೆ ಅನುಮತಿ ನೀಡಲಾಗುವುದು ಎಂದರು.
ಇನ್ನು ದಕ್ಷಿಣ ಆಫ್ರಿಕಾ, ಬೋಟ್ಸ್ ವಾನಾ, ಹಾಂಕಾಂಗ್ ಸೇರಿದಂತೆ ಕೆಲ ದೇಶಗಳಲ್ಲಿ ಕೊರೋನಾ ಹೊಸ ರೂಪಾಂತರಿ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಆ ದೇಶಗಳಿಂದ ಬರುವ ವಿಮಾನಗಳಿಗೆ ನಿಬರ್ಂಧ ಹೇರುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ. ಆರೋಗ್ಯ ಕಾರ್ಯಕರ್ತರಿಗೆ ಬೂಸ್ಟರ್ ಡೋಸ್ ನೀಡಲು ಕೇಂದ್ರದ ಅನುಮತಿಗೆ ಪತ್ರ ಬರೆಯಲಾಗಿದೆ ಎಂದು ಮಾಹಿತಿ ನೀಡಿದರು.
ಇನ್ನು ಮಾಲ್ ಗಳು, ಸಾರ್ವಜನಿಕ ಸ್ಥಳಗಳು, ಕಚೇರಿಗಳಲ್ಲಿ ಎಲ್ಲರಿಗೂ ಎರಡು ಡೋಸ್ ಲಸಿಕೆ ಕಡ್ಡಾಯವಾಗಿರಬೇಕು; ಸರ್ಕಾರಿ ಕಚೇರಿಗಳಿಗೆ ಭೇಟಿ ನೀಡುವವರು ಕೂಡಾ ಎರಡು ಡೋಸ್ ಪಡೆದಿರಬೇಕು; ಮಾಲ್ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಮತ್ತಷ್ಟು ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಹೇಳಿದರು.









