ದೆಹಲಿಯ ಕರ್ನಾಟಕ ಭವನದ ಸಿಬ್ಬಂದಿಗೆ ಕೊರೊನಾ ಸೋಂಕು

ಹೊಸದಿಲ್ಲಿ, ಜೂನ್ 13: ದೆಹಲಿಯಲ್ಲಿರುವ ಕರ್ನಾಟಕ ಭವನದ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಇಲ್ಲಿನ ಕರ್ನಾಟಕ ಭವನದ 25 ವರ್ಷ ಪ್ರಾಯದ ಯುವಕನಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಇವರು ಕರ್ನಾಟಕ ಭವನದಲ್ಲಿ ರೂಮ್ ಬಾಯ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಮೂಲತಃ ದೆಹಲಿಯವರಾದ ಇವರಿಗೆ ಏಕಾಏಕಿ ಜ್ವರ ಬಂದ ಹಿನ್ನಲೆಯಲ್ಲಿ ಕೊರೊನಾ ಪರೀಕ್ಷೆಗೆ ಒಳಪಡಿಸಲಾಯಿತು. ಇಂದು ಅವರ ಗಂಟಲು ದ್ರವ ಮಾದರಿಯ ಪರೀಕ್ಷಾ ವರದಿ ದೊರಕಿದ್ದು, ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಷ್ಟ್ರ ರಾಜಧಾನಿ ದೆಹಲಿಯ ಚಾಣಕ್ಯ ಪುರಿಯ ಕೌಟಿಲ್ಯ ರಸ್ತೆ ಮಾರ್ಗಕ್ಕೆ ಹೊಂದಿಕೊಂಡಿರುವ ಕರ್ನಾಟಕ ಭವನ 1 ರಲ್ಲಿ ಇವರು ರೂಮ್ ಬಾಯ್ ಆಗಿ ಕೆಲಸ ಮಾಡುತ್ತಿದ್ದರು ಎಂದು ಕರ್ನಾಟಕ ಭವನದ ಅಧಿಕಾರಿಗಳು ತಿಳಿಸಿದ್ದು, ಇದೀಗ ಈ ಯುವಕನ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚುವ ಕೆಲಸ ನಡೆಯುತ್ತಿದೆ.
ಅಷ್ಟೇ ಅಲ್ಲ ಕರ್ನಾಟಕ ರಾಜ್ಯ ಸರ್ಕಾರದ ಮೂರು ಭವನಗಳಲ್ಲಿ ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಇನ್ನಷ್ಟು ಹೆಚ್ಚಿನ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ.








