ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ಅವರ ತಂದೆಗೆ ಕೊರೊನಾ ಸೋಂಕು
ಬೆಂಗಳೂರು, ಜೂನ್ 22: ವೈದ್ಯಕೀಯ ಶಿಕ್ಷಣ ಸಚಿವ ಕೆ.ಸುಧಾಕರ್ ಅವರ ತಂದೆಗೆ ಕೊರೋನಾ ಸೋಂಕು ದೃಢಪಟ್ಟಿದೆ. ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ಈ ಮೊದಲು ಸಚಿವ ಸುಧಾಕರ್ ಅವರ ಅಡುಗೆ ಕೆಲಸದವರಿಗೂ ಸೋಂಕು ದೃಢಪಟ್ಟಿದ್ದು, ಅವರನ್ನು ಕೋವಿಡ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇಂದು ಬೆಳಗ್ಗೆ ಸುಧಾಕರ್ ಅವರ 82 ವರ್ಷ ಪ್ರಾಯದ ತಂದೆಯ ಆರೋಗ್ಯದಲ್ಲಿ ಏರುಪೇರು ಕಂಡುಬಂದ ಹಿನ್ನಲೆಯಲ್ಲಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಜ್ವರ ಕೆಮ್ಮು ಮತ್ತು ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಗಂಟಲು ದ್ರವ ಸಂಗ್ರಹಿಸಿ ಕೊರೊನಾ ಪರೀಕ್ಷೆಗೆ ಕಳುಹಿಸಿ ಕೊಡಲಾಗಿದ್ದು, ಇದೀಗ ಬಂದ ಪರೀಕ್ಷಾ ವರದಿ ಅವರಿಗೆ ಕೊರೊನಾ ಸೋಂಕು ತಗುಲಿರುವುದನ್ನು ದೃಢಪಡಿಸಿದೆ. ಅಡುಗೆ ಕೆಲಸದವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದ ಸುಧಾಕರ್ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ನಡೆಸಿದ ತುರ್ತು ಸಭೆಗೂ ಗೈರು ಹಾಜರಾಗಿದ್ದರು.
ಟ್ವಿಟರ್ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸುಧಾಕರ್ ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ ಎಂದು ಬರೆದು ಕೊಂಡಿದ್ದಾರೆ.