ನಿಗದಿತ ಸಮಯದಲ್ಲಿ ಜನರಿಗೆ ಸರ್ಕಾರದ ಸೇವೆ ಒದಗಿಸುವ ಮೂಲಕ ಭ್ರಷ್ಟಾಚಾರ ತಡೆಯಬಹುದು – ಸಿ ಎಂ ಬೊಮ್ಮಾಯಿ
ಎಲ್ಲಾ ಸರ್ಕಾರಿ ನೌಕರರು ಪ್ರಾಮಾಣಿಕತೆ, ನಿಷ್ಠೆ ಹಾಗೂ ದಕ್ಷತೆಯಿಂದ ನಿಗದಿತ ಸಮಯದಲ್ಲಿ ಜನರಿಗೆ ಸರ್ಕಾರದ ಸೇವೆಗಳನ್ನು ಒದಗಿಸಲು ಕಾರ್ಯನಿರ್ವಹಿಸಬೇಕು. ವೃಥಾ ಜನಸಾಮಾನ್ಯರ ಅಲೆದಾಟವನ್ನು ತಪ್ಪಿಸುವ ಮೂಲಕ ಭ್ರಷ್ಟಾಚಾರವನ್ನು ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದರು.
ಶಿವಮೊಗ್ಗ ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಹಯೋಗದೊಂದಿಗೆ ಶಿವಮೊಗ್ಗದಲ್ಲಿಂದು ನಾಗರಿಕ ಸೇವಾ ದಿನದ ಅಂಗವಾಗಿ ರಾಜ್ಯ ಸರ್ಕಾರಿ ನೌಕರರ ದಿನಾಚರಣೆ ಹಾಗೂ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿಗಳು ಸರ್ಕಾರದ ಎಲ್ಲಾ ಸೇವೆಗಳು ಜನರ ಮನೆ ಬಾಗಿಲಲ್ಲೇ ದೊರಕಿಸಿಕೊಡಲು ಸಾಕಷ್ಟು ಕ್ರಮಗಳನ್ನು ಕೈಗೊಳ್ಳಲಾಗಿದೆ. ಅವುಗಳನ್ನು ತಲುಪಿಸಲು ಶ್ರಮಿಸಬೇಕು. ಬದಲಾಗುತ್ತಿರುವ ಕಾಲಘಟ್ಟಕ್ಕೆ ಅನುಗುಣವಾಗಿ ಆಡಳಿತ ಯಂತ್ರವನ್ನು ಚುರುಕುಗೊಳಿಸಲು ಸುಧಾರಣೆಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದರು.
ಗೃಹ ಸಚಿವ ಅರಗ ಜ್ಞಾನೇಂದ್ರ, ಉನ್ನತ ಶಿಕ್ಷಣ ಸಚಿವ, ಡಾ. ಸಿ.ಎನ್. ಅಶ್ವತ್ಥ ನಾರಾಯಣ, ನಗರಾಭಿವೃದ್ದಿ ಸಚಿವ ಬೈರತಿ ಬಸವರಾಜು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು. ಆಡಳಿತದ ವಿವಿಧ ವಿಭಾಗಗಳಲ್ಲಿ ಶ್ರೇಷ್ಠ ಸಾಧನೆ ಮಾಡಿದ ಸರ್ಕಾರಿ ನೌಕರರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.