ಬೆಂಗಳೂರು: ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿ ಮುನಿರತ್ನ ಪರ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದೆ. ವಿಚಾರಣೆಯನ್ನು ಬುಧವಾರಕ್ಕೆ ಮುಂದೂಡಿದರು.
ಗುತ್ತಿಗೆದಾರರೊಬ್ಬರಿಗೆ ಲಂಚ ಹಾಗೂ ಜಾತಿ ನಿಂದನೆ ಮಾಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಮುನಿರತ್ನ ಅವರನ್ನು ಪೊಲೀಸರು ಬಂಧಿಸಿದ್ದರು. ಬಂಧನಕ್ಕೊಳಗಾಗಿದ್ದ ಮುನಿರತ್ನರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಭಾನುವಾರ ಆದೇಶಿಸಿತ್ತು. ಈಗ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದ್ದು, ನಾಳೆ ವಿಚಾರಣೆ ನಡೆಯಲಿದೆ.