ಕೋವಿಡ್ ಹೆಚ್ಚಳ – ಮಾಸ್ಕ್ ಕಡ್ಡಾಯ; ಸರ್ಕಾರದಿಂದ ನೂತನ ಮಾರ್ಗಸೂಚಿ…
ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರ ಹೊಸದಾಗಿ ಮಾರ್ಗಸೂಚಿ ಹೊರಡಿಸಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಕಡ್ಡಾಯಗೊಳಿ ಆದೇಶಿಸಿದೆ.
ಸ್ವಂತ ವಾಹನ ಹಾಗೂ ಸಾರ್ವಜನಿಕ ಸಾರಿಗೆ ಬಸ್, ರೈಲು, ಮೆಟ್ರೋ ರೈಲುಗಳಲ್ಲಿ ಸಂಚರಿಸುವಾಗ ಮುಖಗವಸು ಧರಿಸುವುದು ಕಡ್ಡಾಯವಾಗಿದೆ. ಈಗಾಗಲೇ ಎರಡು ಡೋಸ್ ಲಸಿಕೆ ಪಡೆದು, ಮೂರನೇ ಡೋಸ್ ಪಡೆಯಲು ಅರ್ಹರಾಗಿರುವವರು ಕೂಡಲೇ ಮುನ್ನೆಚ್ಚರಿಕೆ ಡೋಸ್ ಲಸಿಕೆ ಪಡೆದುಕೊಳ್ಳುವಂತೆ ಸರ್ಕಾರ ಹೊಸ ಮಾರ್ಗಸೂಚಿಯಲ್ಲಿ ಸ್ಪಷ್ಟಪಡಿಸಿದೆ.
ಈ ಮಧ್ಯೆ, ರಾಜ್ಯದಲ್ಲಿ ಕೋವಿಡ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಪರಿಸ್ಥಿತಿಯನ್ನು ಸೂಕ್ಷ್ಮ ಹಂತದಲ್ಲಿ ಪರಿಶೀಲಿಸಲಾಗುತ್ತಿದ್ದು, ಕಟ್ಟುನಿಟ್ಟಿನ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರಿನಲ್ಲಿ ನಿನ್ನೆ ಹೇಳಿದ್ದಾರೆ. ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರದ ಹಂತದಲ್ಲಿ ಸೂಕ್ತ ಪರಿಶೀಲನೆ ಕೈಗೊಳ್ಳಲಾಗುತ್ತಿದ್ದು, ಹಿಂದಿನ ಅನುಭವದ ಆಧಾರದ ಮೇಲೆ ಪರಿಸ್ಥಿತಿಯನ್ನು ಪ್ರಾರಂಭದಲ್ಲಿಯೇ ನಿಯಂತ್ರಿಸುವ ವಿಶ್ವಾಸವಿದೆ ಎಂದರು.
ಕೋವಿಡ್ ಸೋಂಕಿಗೆ ಬೂಸ್ಟರ್ ಡೋಸ್ ನೀಡಲು ಮತ್ತೊಂದು ಅಭಿಯಾನ ಕೈಗೊಳ್ಳಲಿದ್ದು, ಇದಕ್ಕಾಗಿ ಸಂಘಸಂಸ್ಥೆಗಳನ್ನು ಸೇರ್ಪಡೆ ಮಾಡಿಕೊಳ್ಳಲಾಗುವುದು. ಕೋವಿಡ್ ಸೂಕ್ತ ನಡವಳಿಕೆಯನ್ನು ಎಲ್ಲರೂ ಪಾಲಿಸಬೇಕು. ಪಕ್ಕದ ರಾಜ್ಯಗಳಾದ ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಿಂದ ಆಗಮಿಸುವವರ ಮೇಲೆಯೂ ನಿಗಾ ವಹಿಸಲಾಗುವುದು ಎಂದರು.