ಬೆಳಗಾವಿ: ಹಲವು ದಿನಗಳಲ್ಲಿ ಕುತೂಹಲದ ಕೇಂದ್ರಬಿಂದುವಾಗಿದ್ದ ರಾಜ್ಯದ ಅತಿದೊಡ್ಡ ಸಹಕಾರಿ ಸಂಸ್ಥೆ ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಬಿಜೆಪಿಯ ರಮೇಶ್ ಕತ್ತಿ, ಉಪಾಧ್ಯಕ್ಷರಾಗಿ ಸುಭಾಷ್ ಢವಳೇಶ್ವರ ಅವಿರೋಧವಾಗಿ ಆಯ್ಕೆಯಾಗಿದ್ದು, ಅಧಿಕೃತ ಘೋಷಣೆಯೊಂದೇ ಬಾಕಿ ಇದೆ.
ಇದರೊಂದಿಗೆ ರಾಜ್ಯದ ಪ್ರತಿಷ್ಟಿತ ಸಹಕಾರ ಸಂಸ್ಥೆಯ ಅಧಿಕಾರ ಹಿಡಿಯಬೇಕೆಂಬ ಬಿಜೆಪಿಯ ಕನಸು ಕೊನೆಗೂ ಕೈಗೂಡಿದೆ. 2018ರಲ್ಲಿ ನಡೆದ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ರಾಜ್ಯ ರಾಜಕಾರಣದ ದಿಕ್ಕನೇ ಬದಲಾಯಿಸಿತ್ತು. ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಬಣ ಡಿಸಿಸಿ ಬ್ಯಾಂಕ್ ಗಾದಿ ಹಿಡಿಯವಲ್ಲಿ ಯಶಸ್ವಿಯಾಗಿತ್ತು. ಇದರೊಂದಿಗೆ ಕಾಂಗ್ರೆಸ್‍ನವರೇ ಆಗಿದ್ದ ಬೆಳಗಾವಿಯ ಸಾಹುಕಾರ ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳಕರ್ ನಡುವೆ ಕಂದಕ ಏರ್ಪಟ್ಟು ಕಾಂಗ್ರೆಸ್-ಜೆಡಿಎಸ್ ದೋಸ್ತಿ ಸರ್ಕಾರ ಪತನಕ್ಕೆ ನಾಂದಿ ಹಾಡಿದ್ದು ಇತಿಹಾಸ.
ಇಬ್ಬರಿಂದ ಮಾತ್ರ ನಾಮಪತ್ರ ಸಲ್ಲಿಕೆ
ಬೆಳಗಾವಿ ಡಿಸಿಸಿ ಬ್ಯಾಂಕ್ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ರಮೇಶ್ ಕತ್ತಿ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸುಭಾಷ್ ಢವಳೇಶ್ವರ ನಾಮಪತ್ರ ಸಲ್ಲಿಸಿದ್ದಾರೆ. ಹೀಗಾಗಿ ಇಬ್ಬರ ಆಯ್ಕೆ ಖಚಿತವಾಗಿದ್ದು, ಅಧಿಕೃತ ಘೋಷಣೆಯಷ್ಟೇ ಬಾಕಿ ಇದೆ.
ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ ವಿಚಾರದಲ್ಲಿ ರಮೆಶ್ ಜಾರಕಿಹೊಳಿ, ಕತ್ತಿ ಟೀಂ ಹಾಗೂ ಲಕ್ಷ್ಮಣ ಸವದಿ ಟೀಂಗಳು ಅಭ್ಯರ್ಥಿಗಳ ಆಯ್ಕೆ ವಿಚಾರದಲ್ಲಿ ಒಮ್ಮತಕ್ಕೆ ಬರಲು ವಿಫಲವಾಗಿದ್ದವು. ಬಿಜೆಪಿ ವರಿಷ್ಠರ ಸೂಚನೆ ಮೇರೆಗೆ ಒಮ್ಮತದ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗಿದೆ. ಇದರೊಂದಿಗೆ ಕಳೆದ ಒಂದು ತಿಂಗಳಿಂದ ಎದ್ದಿದ್ದ ಹೈಡ್ರಾಮಕ್ಕೆ ತೆರೆ ಬಿದ್ದಿದೆ.

ಬೆಳಗಾವಿಯ ಪ್ರವಾಸಿಮಂದಿರದಲ್ಲಿ ಬೆಳಿಗ್ಗೆಯಿಂದಲೇ ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಬಿಜೆಪಿ ಮುಖಂಡರು ಅಂತಿಮ ಸುತ್ತಿನ ಸಭೆ ನಡೆಸಿದರು. ಈಗಾಗಲೇ ಆಯ್ಕೆಯಾಗಿರುವ ಬ್ಯಾಂಕ್‍ನ ನಿರ್ದೇಶಕರ ಅಭಿಪ್ರಾಯಗಳನ್ನು ಆಲಿಸಿ ಅವಿರೋಧ ಆಯ್ಕೆಗೆ ನಿರ್ಧಾರ ಮಾಡಲಾಯಿತು.
ಪ್ರತಿಷ್ಠಿತ ಡಿಸಿಸಿ ಬ್ಯಾಂಕಿನ ಶತಮಾನೋತ್ಸವ ಆಚರಣೆ ಈ ವರ್ಷ ಬರಲಿದೆ. ಹೀಗಾಗಿ ಈ ಬಾರಿ ಚುನಾವಣೆ ಬೇಡ ಎನ್ನುವ ಕಾರಣಕ್ಕೆ ಎಲ್ಲರೂ ಸಮಾಲೋಚನೆ ನಡೆಸಿ ಒಮ್ಮತದ ನಿರ್ಣಯಕ್ಕೆ ಬರಬೇಕು. ಹೀಗೆಂದು ಪಕ್ಷದ ವರಿಷ್ಠರು ಅಪೇಕ್ಷೆ ವ್ಯಕ್ತಪಡಿಸಿದ್ದರು. ಜೊತೆಗೆ 14 ಹಾಲಿ ನಿರ್ದೇಶಕರನ್ನು ಮುಂದುವರಿಸುವಂತೆಯೂ ಹೇಳಿದ್ದರು. ಅವರ ಮಾತು ಉಳಿಸಿಕೊಳ್ಳುವಲ್ಲಿ ಸಫಲರಾಗಿದ್ದೇವೆ ಎಂದು ಉಪಮುಖ್ಯಮಂತ್ರೊ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಹಾಲಿ ಅಧ್ಯಕ್ಷ ರಮೇಶ ಕತ್ತಿ ಹಾಗೂ ಉಪಾಧ್ಯಕ್ಷ ಸುಭಾಷ ಢವಳೇಶ್ವರ ಅವರನ್ನೇ ಮುಂದುವರಿಸುತ್ತಿದ್ದೇವೆಪಕ್ಷದ ಎಲ್ಲಾ ಮುಖಂಡರೂ ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು ಒಂದಾಗಿ ಹೋಗಬೇಕೆಂದು ನಿರ್ಧಾರ ಮಾಡಿದ್ದೇವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ಜಿಲ್ಲೆಯಲ್ಲಿ ಇನ್ನು ಮುಂದೆ ಉಮೇಶ್ ಕತ್ತಿ, ರಮೇಶ ಜಾರಕಿಹೊಳಿ ಹಾಗೂ ಲಕ್ಷಣ ಸವದಿ ನೇತೃತ್ವದಲ್ಲಿ ಪಕ್ಷದ ಸಂಘಟನೆ ಮಾಡುತ್ತೇವೆ. ಯಾವುದೇ ಗೊಂದಲಗಳು ಅಥವಾ ಭಿನ್ನಾಭಿಪ್ರಾಯಗಳು ನಮ್ಮಲ್ಲಿ ಇಲ್ಲ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಅಭಿಪ್ರಾಯ ಹಂಚಿಕೊಳ್ಳಲು ಎಲ್ಲರಿಗೂ ಅವಕಾಶವಿದೆ ಎಂದು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಮರ್ಥಿಸಿಕೊಂಡಿದ್ದಾರೆ.
Our Website : https://saakshatv.com/
Subscribe Now on YouTube
Like us on Facebook
Follow us on Twitter
Follow us on Instagram
Subscribe to our Telegram Channel








