ವಿಜಯಪುರ: ರಾಜ್ಯವನ್ನು ಡ್ರಗ್ಸ್ ಮುಕ್ತ ರಾಜ್ಯವನ್ನಾಗಿಸಲು ತೀರ್ಮಾನಿಸಲಾಗಿದ್ದು, ಪೊಲೀಸ್ ಇಲಾಖೆ ದಿಟ್ಟ ಕ್ರಮ ಕೈಗೊಂಡಿದೆ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ವಿಜಯಪುರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಯಾವಾಗಲೂ ನಿಂತಿಲ್ಲ. ಈಗಾಗಲೇ ಅನೇಕ ಕಡೆ ದಾಳಿ ಮಾಡಲಾಗಿದೆ. ಇನ್ನೂ ಹಲವು ಕಡೆ ದಾಳಿ ಮುಂದುವರೆಯಲಿದೆ ಎಂದರು.
ಬೆಂಗಳೂರು ಸೇರಿದಂತೆ ಆಯಾ ವಲಯಗಳಲ್ಲಿ ಡ್ರಗ್ಸ್ ನಿಯಂತ್ರಣಕ್ಕೆ ಸಾಕಷ್ಟು ಕ್ರಮಕೈಗೊಳ್ಳಲಾಗಿದೆ. ಈಗಾಗಲೇ ಹಲವೆಡೆ ದಾಳಿ ನಡೆಸಿ ಡ್ರಗ್ ಸೀಜ್ ಮಾಡಲಾಗಿದೆ. ಡ್ರಗ್‍ಗೆ ಕಡಿವಾಣ ಹಾಕಲು ಇನ್ನೂ ಹೆಚ್ಚಿನ ಕ್ರಮ ಕೈಗೊಳ್ಳುವಂತೆ ಐಜಿಪಿಗಳು ಹಾಗೂ ಆಯಾ ಜಿಲ್ಲೆಗಳ ಪೊಲೀಸ್ ವರಿಷ್ಟಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ತಿಳಿಸಿದ್ದಾರೆ.
ಡ್ರಗ್ಸ್ ಮಾಫಿಯಾ ವಿರುದ್ಧದ ಕಾರ್ಯಾಚರಣೆ ನಡೆಯುತ್ತಲೇ ಇರುತ್ತದೆ. ಮಹಾರಾಷ್ಟ್ರ ಮತ್ತು ಆಂಧ್ರಪ್ರದೇಶದ ಗಡಿಗಳಲ್ಲಿ ಬೇರೆ ರಾಜ್ಯಗಳಿಂದ ಬರುವ ಹೋಗುವ ವಾಹನಗಳ ತಪಾಸಣೆ ಕಟ್ಟುನಿಟ್ಟಾಗಿ ಮಾಡಲಾಗುತ್ತಿದೆ. ಆಯಾ ಎಸ್‍ಪಿ, ಐಜಿಗಳಿಗೆ ಈ ಸಂಬಂಧ ಸೂಚನೆ ನೀಡಿದ್ದೇನೆ ಎಂದು ಪ್ರವೀಣ್ ಸೂದ್ ಮಾಹಿತಿ ನೀಡಿದ್ದಾರೆ.
ಇದೇ ವೇಳೆ, 6 ಸಾವಿರ ಪೊಲೀಸ್ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇವರಲ್ಲಿ 44 ಮಂದಿ ಮೃತಪಟ್ಟಿದ್ದಾರೆ. ಮೃತಪಟ್ಟ ಎಲ್ಲರ ಕುಟುಂಬಕ್ಕೂ ತಲಾ 30 ಲಕ್ಷ ಪರಿಹಾರ ನೀಡಲಾಗಿದೆ. ಜತೆಗೆ ಅವಲಂಭಿತರಿಗೆ ಸರ್ಕಾರಿ ನೌಕರಿ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ.







