ನವದೆಹಲಿ: ದೆಹಲಿ ವಿಮಾನ ನಿಲ್ದಾಣದ (Delhi Airport) ಟರ್ಮಿನಲ್ 1 ರಲ್ಲಿ ಛಾವಣಿ ಕುಸಿದ ಪರಿಣಾಮ 6 ಜನ ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಈ ಘಟನೆ ಶುಕ್ರವಾರ ಬೆಳಿಗ್ಗೆ 5.30ರ ವೇಳೆಗೆ ನಡೆದಿದೆ. ಭಾರೀ ಮಳೆಯಿಂದಾಗಿ ಈ ಅವಘಡ ಸಂಭವಿಸಿದೆ ಎನ್ನಲಾಗಿದೆ. ಕೂಡಲೇ ಮೂರು ಅಗ್ನಿಶಾಮಕ ವಾಹನಗಳನ್ನು ಸ್ಥಳಕ್ಕೆ ರವಾನಿಸಲಾಯಿತು. ಘಟನೆಯಲ್ಲಿ 6 ಜನ ಗಾಯಗೊಂಡಿದ್ದು, ಗಾಯಾಳುಗಳನ್ನು ರಕ್ಷಿಸಿ ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದೆಹಲಿ ಅಗ್ನಿಶಾಮಕ ದಳದ ಅಧಿಕಾರಿ ಹೇಳಿದ್ದಾರೆ.
ಛಾವಣಿ ಕುಸಿತದಿಂದ ಟ್ಯಾಕ್ಸಿ ಸೇರಿದಂತೆ ಹಲವು ವಾಹನಗಳು ಜಖಂ ಆಗಿವೆ. ಘಟನೆಯ ಪರಿಣಾಮ ಟರ್ಮಿನಲ್ 1 ರಿಂದ ಎಲ್ಲಾ ನಿರ್ಗಮನಗಳನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಕೇಂದ್ರ ನಾಗರಿಕ ವಿಮಾನಯಾನ ಸಚಿವ ರಾಮ್ ಮೋಹನ್ ನಾಯ್ಡು ಕಿಂಜರಾಪು ಎಕ್ಸ್ ಮಾಡಿ, ಟಿ1 ದೆಹಲಿ ವಿಮಾನ ನಿಲ್ದಾಣದ ಮೇಲ್ಛಾವಣಿ ಕುಸಿತದ ಘಟನೆಯ ಕುರಿತು ಮೇಲ್ವಿಚಾರಣೆ ನಡೆಸಲಾಗುತ್ತಿದೆ. ರಕ್ಷಣಾ ಕಾರ್ಯಾಚರಣೆಗಳು ಇನ್ನೂ ನಡೆಯುತ್ತಿವೆ ಎಂದು ಬರೆದುಕೊಂಡಿದ್ದಾರೆ.