ದ್ವೇಷಪೂರಿತ ಭಾಷಣ ಮಾಡಿದ್ದಾರೆಂದು ಆರೋಪಿಸಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ವಾದ್ರಾ ಮತ್ತು ಇತರರ ವಿರುದ್ಧ ದೆಹಲಿ ಹೈಕೋರ್ಟ್ ಗೆ ಸಲ್ಲಿಸಲಾಗಿರುವ ಅರ್ಜಿ ಸಂಬಂಧ ದೆಹಲಿ ಹೈಕೋರ್ಟ್ ಕೇಂದ್ರ ಸರ್ಕಾರ, ದೆಹಲಿ ರಾಜ್ಯ ಸರ್ಕಾರ ಹಾಗೂ ದೆಹಲಿ ಪೊಲೀಸರಿಗೆ ಶುಕ್ರವಾರ ನೊಟೀಸ್ ನೀಡಿದೆ.
ವಾಯ್ಸ್ ಆಫ್ ಲಾಯರ್ಸ್, ದ್ವೇಷದ ಭಾಷಣ ಕುರಿತು ತನಿಖೆಗೆ ವಿಶೇಷ ತನಿಖಾ ತಂಡ ರಚಿಸಬೇಕು ಮತ್ತು ದ್ವೇಷಪೂರಿತ ಭಾಷಣ ಮಾಡಿರುವ ನಾಯಕರ ವಿರುದ್ಧ ಎಫ್.ಐ.ಆರ್ ದಾಖಲಿಸಬೇಕೆಂದು ಕೋರಿ ದೆಹಲಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿತ್ತು. ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಾಟೀಲ್ ಹಾಗೂ ನ್ಯಾಯಮೂರ್ತಿ ಸಿ. ಹರಿಶಂಕರ್ ಅವರರನ್ನು ಒಳಗೊಂಡ ವಿಭಾಗೀಯ ಪೀಠ, ನೋಟೀಸ್ ಜಾರಿ ಮಾಡಿ ವಿಚಾರಣೆಯನ್ನು ಏಪ್ರಿಲ್ 13ಕ್ಕೆ ಮುಂದೂಡಿತು. ದ್ವೇಷದ ಭಾಷಣ ಕುರಿತು ತನಿಖೆ ನಡೆಸಲು ವಿಶೇಷ ತನಿಖಾ ತಂಡವನ್ನು ರಚಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಬೇಕು ಎಂದು ಅರ್ಜಿಯಲ್ಲಿ ಮನವಿ ಮಾಡಲಾಗಿದೆ. ದೆಹಲಿಯಲ್ಲಿ ನಡೆದ ಹಿಂಸಾಚಾರಕ್ಕೆ 38 ಮಂದಿ ಬಲಿಯಾಗಿದ್ದು, ರಾಜಕೀಯ ನಾಯಕರ ದ್ವೇಷ ಪೂರಿತ ಭಾಷಣಗಳಿಂದ ಕೋಮು ಗಲಭೆಗಳು ಭುಗಿಲೆದ್ದಿದ್ದವು ಎಂದು ಅರ್ಜಿಯಲ್ಲಿ ಆರೋಪಿಸಲಾಗಿದೆ.
ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕ ವಾದ್ರಾ, ಆಮ್ ಆದ್ಮಿ ಪಕ್ಷದ ನಾಯಕರಾದ ಮನೀಷ್ ಸಿಸೋಡಿಯ, ಅಮಾನುಲ್ಲಾ ಖಾನ್, ಎ ಐ ಎಂ ಐ ಎಂ ನಾಯಕರಾದ ಅಕ್ಬರುದ್ದೀನ್ ಓವೈಸಿ, ವಾರೀಸ್ ಪಠಾಣ್ ಹಾಗೂ ವಕೀಲ ಮೆಹಮೂದ್ ಪರೇಚಾ ಸೇರಿದಂತೆ ಪ್ರಚೋದನಕಾರಿ ಭಾಷಣ ಮಾಡಿದ ಹಲವು ನಾಯಕರ ವಿರುದ್ದ ಪ್ರಕರಣ ದಾಖಲಿಸಲು ಆದೇಶಿಸಬೇಕು ಎಂದು ಅರ್ಜಿಯಲ್ಲಿ ಕೋರಲಾಗಿದೆ.








