ಬೆಂಗಳೂರು: ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ, ಮಲ್ಲಿಕಾರ್ಜುನ ಖರ್ಗೆ ಹಾಗೂ ಬಿಜೆಪಿ ಅಭ್ಯರ್ಥಿಗಳಾದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ನಾಮಪತ್ರ ಹಿಂಪಡೆಯಲು ಇಂದು(ಶುಕ್ರವಾರ) ಕಡೆಯ ದಿನವಾಗಿತ್ತು. ಪಕ್ಷೇತರ ಅಭ್ಯರ್ಥಿಯೊಬ್ಬರು ಸಲ್ಲಿಸಿದ್ದ ನಾಮಪತ್ರಕ್ಕೆ ಯಾವುದೇ ಸೂಚಕ ಶಾಸಕರು ಸಹಿಮಾಡದ ಹಿನ್ನೆಲೆಯಲ್ಲಿ ಅವರ ನಾಮಪತ್ರವನ್ನು ತಿರಸ್ಕರಿಸಲಾಗಿದೆ. ಈ ಹಿನ್ನೆಲೆಯಲ್ಲಿ ನಾಲ್ವರು ಅಭ್ಯರ್ಥಿಗಳು ಯಾವುದೇ ಚುನಾವಣೆ ಇಲ್ಲದೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ವಿಧಾನಸಭೆ ಕಾರ್ಯದರ್ಶಿ ಹಾಗೂ ಚುನಾವಣಾಧಿಕಾರಿ ವಿಶಾಲಾಕ್ಷಿ ಪ್ರಕಟಿಸಿದ್ದಾರೆ.
ಕಾಂಗ್ರೆಸ್‍ನಿಂದ ಮಾಜಿ ಸಚಿವ ಮಲ್ಲಿಕಾರ್ಜುನ ಖರ್ಗೆ, ಜೆಡಿಎಸ್‍ನಿಂದ ಹೆಚ್.ಡಿ ದೇವೇಗೌಡ, ಬಿಜೆಪಿಯಿಂದ ಅಶೋಕ್ ಗಸ್ತಿ, ಈರಣ್ಣ ಕಡಾಡಿ ನಾಮಪತ್ರ ಸಲ್ಲಿಸಿದ್ದರು. ಕಳೆದ ವರ್ಷ ನಡೆದ ಲೋಕಸಭಾ ಚುನಾವಣೆಯಲ್ಲಿ ದೇವೇಗೌಡರು ತುಮಕೂರು ಹಾಗೂ ಮಲ್ಲಿಕಾರ್ಜುನ ಖರ್ಗೆ ಕಲಬುರಗಿ ಕ್ಷೇತ್ರದಲ್ಲಿ ಸೋಲು ಅನುಭವಿಸಿದ್ದರು.
ಹಿಂಬಾಗಿಲ ಮೂಲಕ ರಾಜ್ಯಸಭೆಗೆ ಪ್ರವೇಶ ಮಾಡುವುದಿಲ್ಲ ಎಂದು ಹಠ ಹಿಡಿದಿದ್ದ ದೇವೇಗೌಡರು, ಆಪ್ತರ ಮನವೊಲಿಕೆ ಬಳಿಕ ಕೊನೆ ದಿನ ನಾಮಪತ್ರ ಸಲ್ಲಿಸಿದ್ದರು. ಕೇವಲ ನಾಲ್ವರು ಮಾತ್ರ ನಾಮಪತ್ರ ಸಲ್ಲಿಸಿದ್ದಾಗ ದೇವೇಗೌಡರ ರಾಜ್ಯಸಭೆ ಪ್ರವೇಶಕ್ಕಾಗಿ ಬೇರೆ ಅಭ್ಯರ್ಥಿಗಳನ್ನು ನಿಲ್ಲಿಸಿಲ್ಲ ಎಂಬ ಮಾತುಗಳು ಕೇಳಿ ಬಂದಿದ್ದವು. ಈಗ ಈ ಎಲ್ಲಾ ಊಹಾಪೋಹಗಳಿಗೆ ತೆರೆಬಿದ್ದಿದ್ದು ಮಣ್ಣಿನ ಮಗನ ಸಂಸತ್ ಭವನ ಪ್ರವೇಶಕ್ಕೆ ಅಧಿಕೃತ ಮುದ್ರೆ ಬಿದ್ದಿದೆ.








