ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಸಂಚಲನ ಮೂಡಿಸುವಂತಹ ಹೇಳಿಕೆಯನ್ನು ಮಾಜಿ ಪ್ರಧಾನಿ ಹಾಗೂ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ನೀಡಿದ್ದಾರೆ. ಜೆಡಿಎಸ್ ಪಕ್ಷದಲ್ಲೇ ಇದ್ದಿದ್ದರೆ ನಾನು ಮುಖ್ಯಮಂತ್ರಿಯಾಗುತ್ತಿರಲಿಲ್ಲ ಎಂಬ ಸಿದ್ದರಾಮಯ್ಯ ಅವರ ಹೇಳಿಕೆಗೆ ತಿರುಗೇಟು ನೀಡಿರುವ ಗೌಡರು, ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಮಾಡುವಂತೆ ಕೋರಿ ನಾನು ಮೂರು ಬಾರಿ ಸೋನಿಯಾ ಗಾಂಧಿ ಅವರ ಮನೆ ಬಾಗಿಲಿಗೆ ಹೋಗಿದ್ದೆ ಎಂಬ ಸ್ಫೋಟಕ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.
ಜೆಡಿಎಸ್ ಬೆಳ್ಳಿಹಬ್ಬದ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರ ವಿರುದ್ಧ ಹಾಗೂ ವಿಶೇಷವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಇದೇ ವೇಳೆ ಎನ್‍ಡಿಎ ಮೈತ್ರಿಕೂಟದ ಬಗ್ಗೆಯೂ ಸ್ಪಷ್ಟ ಸಂದೇಶ ರವಾನಿಸಿದರು.
ಸಿದ್ದರಾಮಯ್ಯನವರು ಜೆಡಿಎಸ್ ತೊರೆದಿದ್ದಕ್ಕೆ ತಮಗೆ ಯಾವುದೇ ಪಶ್ಚಾತ್ತಾಪವಿಲ್ಲ ಎಂದು ಹೇಳಿದ ದೇವೇಗೌಡರು, ಹಳೆಯ ಘಟನೆಯನ್ನು ಮೆಲುಕು ಹಾಕಿದರು. ನಾನು ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಮಾಡಲು ತಯಾರಿದ್ದೆ. ಆದರೆ ಅಂದು ಸೋನಿಯಾ ಗಾಂಧಿಯವರು ಧರ್ಮಸಿಂಗ್ ಅವರನ್ನು ಸಿಎಂ ಮಾಡಲು ಪಟ್ಟು ಹಿಡಿದರು. ಆಗ ನಾನು ಸೋನಿಯಾ ಗಾಂಧಿಯವರ ಮನೆಗೆ ಮೂರು ಬಾರಿ ಭೇಟಿ ನೀಡಿ ಮನವಿ ಮಾಡಿದ್ದೆ.
ಕಾಶ್ಮೀರದಲ್ಲಿ ಗುಲಾಮ್ ನಬಿ ಆಝಾದ್ ಅವರನ್ನು ಡಿಸಿಎಂ ಮಾಡಿ, ಮುಫ್ತಿ ಮೊಹಮ್ಮದ್ ಸಯ್ಯಿದ್ ಅವರನ್ನು ಸಿಎಂ ಮಾಡಿದ ರೀತಿಯಲ್ಲೇ, ಕರ್ನಾಟಕದಲ್ಲಿ ಸಿದ್ದರಾಮಯ್ಯ ಅವರನ್ನು ಸಿಎಂ ಮಾಡಿ ಎಂದು ಕೇಳಿಕೊಂಡಿದ್ದೆ. ಈ ವಿಷಯದಲ್ಲಿ ನಾನು ಸುಳ್ಳು ಹೇಳುತ್ತಿಲ್ಲ, ಬೇಕಿದ್ದರೆ ಸಿದ್ದರಾಮಯ್ಯನವರು ಸೋನಿಯಾ ಗಾಂಧಿ ಅವರನ್ನೇ ಕೇಳಲಿ, ಅವರು ಇನ್ನೂ ಬದುಕಿದ್ದಾರೆ ಎಂದು ದೇವೇಗೌಡರು ಸವಾಲು ಹಾಕಿದರು.
ಸಿದ್ದರಾಮಯ್ಯ ಅವರನ್ನು ಉಪಮುಖ್ಯಮಂತ್ರಿ ಮಾಡಿದ ಸಂದರ್ಭದಲ್ಲಿ ತಾನು ಕಣ್ಣೀರು ಹಾಕಿದ್ದೆ ಎಂದು ಸ್ಮರಿಸಿದ ಗೌಡರು, ಅವರನ್ನು ಹಣಕಾಸು ಸಚಿವರನ್ನಾಗಿ ಮಾಡಿದ್ದು ರಾಮಕೃಷ್ಣ ಹೆಗಡೆ ಅಲ್ಲ, ಅದು ನಾನು. ಆ ಕೃತಜ್ಞತೆಯನ್ನು ಆ ಮನುಷ್ಯ ನೆನಪಿನಲ್ಲಿ ಇಟ್ಟುಕೊಳ್ಳಬೇಕು. ಸಿದ್ದರಾಮಯ್ಯ ನಮ್ಮ ಪಕ್ಷಕ್ಕೆ ಯಾವುದೇ ಕೊಡುಗೆ ನೀಡಿಲ್ಲ. ಇಂತಹ ಅನೇಕರು ಪಕ್ಷಕ್ಕೆ ಬರುತ್ತಾರೆ ಮತ್ತು ಹೋಗುತ್ತಾರೆ, ಅದಕ್ಕೆ ನಾನು ಹೆದರುವುದಿಲ್ಲ. ನನ್ನ ಶಕ್ತಿ ಇರುವವರೆಗೂ ಪಕ್ಷ ಕಟ್ಟುತ್ತೇನೆ ಎಂದು ಗುಡುಗಿದರು.
ಎನ್‍ಡಿಎ ಮೈತ್ರಿ ಕಡಿದುಕೊಳ್ಳುವ ಪ್ರಶ್ನೆಯೇ ಇಲ್ಲ
ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದ ಬಗ್ಗೆ ಸ್ಪಷ್ಟನೆ ನೀಡಿದ ಅವರು, ಯಾವುದೇ ಕಾರಣಕ್ಕೂ ನಾವು ಎನ್‍ಡಿಎ ಮೈತ್ರಿಯನ್ನು ಕಡಿದುಕೊಳ್ಳುವುದಿಲ್ಲ ಎಂದು ಘೋಷಿಸಿದರು. ಪ್ರಧಾನಿ ನರೇಂದ್ರ ಮೋದಿ ಹಾಗೂ ಗೃಹ ಸಚಿವ ಅಮಿತ್ ಶಾ ಅವರ ನಾಯಕತ್ವದಲ್ಲಿ ನಮಗೆ ಸಂಪೂರ್ಣ ವಿಶ್ವಾಸವಿದೆ. ಕೇಂದ್ರದಲ್ಲಿ ಬಲಿಷ್ಠ ಸರ್ಕಾರ ಆಡಳಿತ ನಡೆಸುತ್ತಿದ್ದು, ಇದನ್ನು ಪಕ್ಷದ ಕಾರ್ಯಕರ್ತರು ಮತ್ತು ಮುಖಂಡರು ಮರೆಯಬಾರದು ಎಂದು ಕಿವಿಮಾತು ಹೇಳಿದರು.
ತುರ್ತು ಪರಿಸ್ಥಿತಿಯ ಕಾಲದಲ್ಲಿ ಜಯಪ್ರಕಾಶ ನಾರಾಯಣ್ ಅವರ ನೇತೃತ್ವದಲ್ಲಿ ನಾವು ಮತ್ತು ಇಂದಿನ ಬಿಜೆಪಿಯವರು ಒಟ್ಟಾಗಿ ಕೆಲಸ ಮಾಡಿದ್ದೇವೆ. ರಾಷ್ಟ್ರದ ಹಿತದೃಷ್ಟಿಯಿಂದ ನಾವು ಒಗ್ಗೂಡಿ ನಡೆಯಬೇಕಿದೆ. ಕಾಂಗ್ರೆಸ್ ಪಕ್ಷದ ದುರಾಡಳಿತಕ್ಕೆ ತಕ್ಕ ಪಾಠ ಕಲಿಸಬೇಕಿದೆ ಎಂದು ಕರೆ ನೀಡಿದರು.
ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರನ್ನು ಉದಾಹರಣೆಯಾಗಿ ನೀಡಿದ ದೇವೇಗೌಡರು, ಉತ್ತರ ಭಾರತದಲ್ಲಿ ಜೆಡಿಯು ಹೇಗೋ, ದಕ್ಷಿಣ ಭಾರತದಲ್ಲಿ ಜೆಡಿಎಸ್ ಹಾಗೆ ಇರಬೇಕು ಎಂದರು. ನಿತೀಶ್ ಕುಮಾರ್ ಮೂವತ್ತು ವರ್ಷಗಳಿಂದ ರಾಜಕಾರಣದಲ್ಲಿದ್ದು, 10ನೇ ಬಾರಿ ಸಿಎಂ ಆಗಿದ್ದಾರೆ. ಅವರು ಅತ್ಯಂತ ಸೂಕ್ಷ್ಮವಾಗಿ ರಾಜಕಾರಣ ಮಾಡಿಕೊಂಡು ಬಂದಿದ್ದಾರೆ. ಅದೇ ರೀತಿ ಇಲ್ಲಿ ಕುಮಾರಸ್ವಾಮಿ ಮತ್ತು ಪಕ್ಷದ ಮುಖಂಡರು ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.








