ಹಾಸನ : ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಹಾಸನದಲ್ಲಿ ಆಗಸ್ಟ್ 14ರ ಶುಕ್ರವಾರ ಮಧ್ಯಾಹ್ನ 12ಕ್ಕೆ ಬೃಹತ್ ಪ್ರತಿಭಟನೆ ಮಾಡುವುದಾಗಿ ಮಾಜಿ ಸಚಿವ ಹೆಚ್.ಡಿ.ರೇವಣ್ಣ ತಿಳಿಸಿದ್ದಾರೆ.
ಹಾಸನದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ಪ್ರಗತಿಪರ, ರೈತಪರ ಮತ್ತು ಕಾರ್ಮಿಕರ ಪರ ಇರುವ ಕಾಯ್ದೆಗಳು ಕರ್ನಾಟಕ ಭೂ ಸುಧಾರಣೆ ಕಾಯ್ದೆ-1961, ಕರ್ನಾಟಕ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ, ನಿಯಂತ್ರಣ ಮತ್ತು ಅಭಿವೃದ್ಧಿ ಕಾಯಿದೆ-1966 ಮತ್ತು ಕೈಗಾರಿಕಾ ವ್ಯಾಜ್ಯ ಕಾಯ್ದೆ-1947, ಕಾರ್ಖಾನೆ ಕಾಯ್ದೆ-1948 ಹಾಗೂ ಗುತ್ತಿಗೆ ಕಾರ್ಮಿಕರ ನಿಯಂತ್ರಣ ಮತ್ತು ನಿರ್ಮೂಲನೆ ಕಾಯ್ದೆಗಳಿಗೆ ಸುಗ್ರೀವಾಜ್ಞೆ ಮೂಲಕ ರೈತ ಮತ್ತು ಕಾರ್ಮಿಕರ ಹಿತಕ್ಕೆ ಧಕ್ಕೆ ತರುವ ತಿದ್ದುಪಡಿಗಳನ್ನು ಮಾಡಲಾಗಿದೆ. ಹೀಗಾಗಿ ಈ ಕಾಯ್ದೆಗಳನ್ನು ಹಿಂತೆಗೆದುಕೊಳ್ಳಲು ಒತ್ತಾಯಿಸಿ ಮಾಜಿ ಪ್ರಧಾನಿ ದೇವೇಗೌಡರ ನೇತೃತ್ವದಲ್ಲಿ ಸಂಸದರು, ಶಾಸಕರು ಎಲ್ಲಾ ಸೇರಿ ಹೇಮಾವತಿ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಮೆರವಣಿಗೆ ಮೂಲಕ ಬಂದು ಡಿಸಿ ಅವರಿಗೆ ಮನವಿ ಸಲ್ಲಿಸಲಾಗುವುದು ಎಂದು ರೇವಣ್ಣ ತಿಳಿಸಿದರು.