ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡ ಅವರ ಶಾಪವನ್ನು ನಾನು ಯಾವಾಗಲೂ ಆಶೀರ್ವಾದ ಎಂದೇ ತಿಳಿದುಕೊಂಡಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯ ಹಾಗೂ ಡಿಕೆಶಿ ನೇತೃತ್ವದಲ್ಲಿ ಕಾಂಗ್ರೆಸ್ ಅಂತ್ಯವಾಗಲಿದೆ ಎಂದು ಹೇಳಿಕೆ ನೀಡಿದ್ದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರಿಗೆ ಸಿಎಂ ತಿರುಗೇಟು ನೀಡಿದೆ. ವಯಸ್ಸಿನಲ್ಲಿ ದೊಡ್ಡವರಾಗಿರುವ ದೇವೇಗೌಡರ ಶಾಪವನ್ನು ಆಶೀರ್ವಾದ ಎಂದೇ ಸ್ವೀಕರಿಸಿದ್ದೇನೆ. ಅವರಿಗೆ, ಅವರ ಪಕ್ಷಕ್ಕೆ ದೀರ್ಘ ಕಾಲ ಆಯುರಾರೋಗ್ಯವನ್ನು ಪರಮಾತ್ಮ ಕರುಣಿಸಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ.
ರಾಜಕೀಯದಲ್ಲಿ ಭಿನ್ನಾಭಿಪ್ರಾಯ ಸಹಜ. ಆದರೆ, ಹಿರಿಯರು, ಕಿರಿಯರಿಗೆ ಆಶೀರ್ವಾದ ಮಾಡಬೇಕು. ಶಾಪ ಕೊಡಬಾರದು. ದಶಕಗಳ ಕಾಲ ಜಾತ್ಯತೀತತೆಯ ಕಿರೀಟ ಧರಿಸಿಕೊಂಡು ಬಂದಿದ್ದ ಗೌಡರು ಇಳಿಗಾಲದಲ್ಲಿ ಅದನ್ನು ಕೆಳಗೆಸೆದು ಕೋಮುವಾದಿ ಕಿರೀಟ ಧರಿಸಿಕೊಳ್ಳಬೇಕಾಗಿ ಬಂದಿರುವುದರಿಂದ ಹತಾಶೆಯಿಂದ ಈ ರೀತಿ ಹೇಳುತ್ತಿರಬಹುದು ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಜಾತ್ಯತೀತ ಜನತಾ ಪಕ್ಷ ಎನ್ನುವುದು ‘ಬಿಜೆಪಿಯ ಬಿ ಟೀಮ್’ ಎಂದು ನಾನು ಯಾವಾಗಲೂ ಹೇಳುತ್ತ ಬಂದಿದ್ದೇನೆ. ನನ್ನ ಮಾತು ಒಪ್ಪಿಕೊಂಡು ತಮ್ಮ ಸೈದ್ಧಾಂತಿಕ ನಿಲುವನ್ನು ಸ್ಪಷ್ಟಪಡಿಸಿದ್ದಕ್ಕೆ ಜೆಡಿಎಸ್ ಪಕ್ಷವನ್ನು ಅಭಿನಂದಿಸುತ್ತೇನೆ ಎಂದು ವ್ಯಂಗ್ಯವಾಡಿದ್ದಾರೆ.








