ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾದ ಬೆನ್ನಲ್ಲೆ ಟ್ರಬಲ್ ಶೂಟರ್ ಡಿ.ಕೆ ಶಿವಕುಮಾರ್ ಪಕ್ಷ ಸಂಘಟನೆಗೆ ಮುಂದಾಗಿದ್ದು, ಈ ನಿಟ್ಟಿನಲ್ಲಿ ಮೊದಲ ಹೆಜ್ಜೆಯನ್ನಿಟ್ಟಿದ್ದಾರೆ. ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಲು ಡಿಕೆಶಿ ಮುಂದಾಗಿದ್ದು, ಇಂದು ಸಿದ್ದರಾಮಯ್ಯ, ಮಲ್ಲಿಕಾರ್ಜುನ್ ಖರ್ಗೆ ಅವರನ್ನು ಭೇಟಿ ಮಾಡಿದ್ದಾರೆ. ಈ ವೇಳೆ ಪಕ್ಷವನ್ನು ಬಲಿಷ್ಠಗೊಳಿಸುವ ಹಾಗೂ ಸಂಘಟಿಸುವ ಬಗ್ಗೆ ಹಿರಿಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ.

ಇಂದು ಬೆಳಗ್ಗೆ ಸಿದ್ದರಾಮಯ್ಯ ಅವರ ನಿವಾಸಕ್ಕೆ ಭೇಟಿ ನೀಡಿದ್ದ ಡಿಕೆಶಿ, ಪಕ್ಷ ಸಂಘಟನೆ ಸೇರಿದಂತೆ ಹಲವು ವಿಚಾರಗಳ ಬಗ್ಗೆ 30 ನಿಮಿಷಗಳ ಕಾಲ ಮಾತುಕತೆ ನಡೆಸಿದ್ರು. ಈ ವೇಳೆ ಸಿದ್ದರಾಮಯ್ಯ ಡಿಕೆಶಿ ಅವರನ್ನು ಅಭಿನಂದಿಸಿ, ಶುಭ ಹಾರೈಸಿದ್ರು.

ಬಳಿಕ ಡಿ.ಕೆ ಶಿವಕುಮಾರ್ ಕಾಂಗ್ರೆಸ್ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಅವರನ್ನ ಭೇಟಿಯಾದರು. ಸದಾಶಿವನಗರದ ಮಲ್ಲಿಕಾರ್ಜುನ ಖರ್ಗೆ ನಿವಾಸಕ್ಕೆ ಭೇಟಿ ನೀಡಿದ ಅವರು, ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಚರ್ಚಿಸಿದ್ದಾರೆ. ಅಲ್ಲದೇ ಪಕ್ಷ ಸಂಘಟನೆಗೆ ಸಹಕಾರ ನೀಡುವಂತೆ ಕೋರಿದ್ದಾರೆ. ಈ ವೇಳೆ ಸಂಸದ ಡಿ.ಕೆ.ಸುರೇಶ್, ಶಾಸಕ ಡಾ.ರಂಗನಾಥ್ ಇದ್ದರು.









