ಮಂಗಳೂರು, ಜೂನ್ 2 : ದೇಶದಾದ್ಯಂತ ಐದನೇ ಹಂತದ ಲಾಕ್ ಡೌನ್ ಆದೇಶ ಜಾರಿಯಲ್ಲಿದ್ದು, ಹಲವಾರು ನಿರ್ಬಂಧಗಳನ್ನು ಸಡಿಲಿಕೆ ಮಾಡಲಾಗಿದೆ. ಈಗಾಗಲೇ ಕೇಂದ್ರ ಸರ್ಕಾರ ಜೂನ್ 01 ರಿಂದ 31ರ ವರೆಗೆ ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯ ತನಕ ಮಾತ್ರ ಕರ್ಪ್ಯೂ ವಿಧಿಸಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೆ ತರಲು ಜಿಲ್ಲಾಧಿಕಾರಿ ಆದೇಶ ನೀಡಿದ್ದು, ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ರಾತ್ರಿ 9 ಗಂಟೆಯ ಬಳಿಕ ಬೆಳಗ್ಗಿನ ಜಾವ 5 ಗಂಟೆಯ ವರೆಗೆ ಜನ ಸಂಚಾರ ಮತ್ತು ವಾಹನ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ. ಯಾರಾದರೂ ನಿಯಮ ಉಲ್ಲಂಘಿಸಿದಲ್ಲಿ ಅವರ ವಿರುದ್ಧ
ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಆದೇಶ ನೀಡಿದ್ದಾರೆ.
ಜಿಲ್ಲೆಯಲ್ಲಿ ವ್ಯಾಪಾರ ವಹಿವಾಟುಗಳಿಗೆ ಅವಕಾಶ ನೀಡಿದ್ದು, ಸಾರ್ವಜನಿಕರಿಗೆ ಅಗತ್ಯ ವಸ್ತುಗಳ ಖರೀದಿಗೆ ಅನುಮತಿ ನೀಡಲಾಗಿದೆ. ಆದರೆ ಮನೆಯಿಂದ ಹೊರಗೆ ಬರುವವರು ಕಡ್ಡಾಯವಾಗಿ ಮಾಸ್ಕ್ ಧರಿಸಲೇ ಬೇಕಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಾಸ್ಕ್ ಧರಿಸದೆ ಓಡಾಡುವವರಿಗೆ ದಂಡ ವಿಧಿಸಲಾಗಿದ್ದು, ನಗರ ಪ್ರದೇಶಗಳಲ್ಲಿ ಮಾಸ್ಕ್ ಇಲ್ಲದೇ ಓಡಾಡಿದವರಿಗೆ 200 ರೂ ದಂಡ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ 100 ರೂಪಾಯಿ ದಂಡ ವಿಧಿಸಲು ತೀರ್ಮಾನಿಸಲಾಗಿದೆ.








