ಬೆಂಗಳೂರು: ಚನ್ನಪಟ್ಟಣದ ಕಾಂಗ್ರೆಸ್ ಅಭ್ಯರ್ಥಿ (Congress) ಯಾರೇ ಆದರೂ ನನಗೆ ಮತ ಹಾಕಿದಂತೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಹೇಳಿದ್ದಾರೆ.
ಈಗಾಗಲೇ ಚನ್ನಪಟ್ಟಣ ಉಪ ಚುನಾವಣೆಗೆ ಮೈತ್ರಿ ಪಕ್ಷಗಳು ಹಾಗೂ ಕಾಂಗ್ರೆಸ್ ಮಧ್ಯೆ ಜೋರು ಫೈಟ್ ನಡೆಯುತ್ತಿದೆ. ಮೈತ್ರಿಯಲ್ಲಿ ಟಿಕೆಟ್ ಗಾಗಿ ಪೈಪೋಟಿ ನಡೆಯುತ್ತಿದೆ. ಜೆಡಿಎಸ್ ಕ್ಷೇತ್ರ ಬಿಟ್ಟು ಕೊಡಲು ಒಪ್ಪುತ್ತಿಲ್ಲ. ಇನ್ನೊಂದೆಡೆ ಹೈಕಮಾಂಡ್ ಯಾರಿಗೆ ಟಿಕೆಟ್ ನೀಡಿದರೂ ನನ್ನ ಸ್ಪರ್ಧೆ ಖಚಿತ ಎಂದು ಸಿ.ಪಿ. ಯೋಗೇಶ್ವರ್ ಹೇಳುತ್ತಿದ್ದಾರೆ. ಹೀಗಾಗಿ ದೋಸ್ತಿಗೆ ಇದು ತಲೆನೋವು ತಂದಿದೆ. ಇದರ ಲಾಭ ಮಾಡಿಕೊಳ್ಳಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ.
ಹೀಗಾಗಿ ಈ ಕುರಿತು ಮಾತನಾಡಿರುವ ಡಿಕೆಶಿ, ಜನರು ಸೇವೆ ಮಾಡಲು ನಮಗೆ ಅಧಿಕಾರ, ಅವಕಾಶ ನೀಡಿದ್ದಾರೆ. ನಾವು ನಮ್ಮ ಅಧಿಕಾರ ಬಳಸಿಕೊಂಡು ಜನರಿಗಾಗಿ ಯಾವ ರೀತಿ ಒಳ್ಳೆಯದು ಮಾಡಬೇಕು ಎಂಬುದು ನಮ್ಮ ಸರ್ಕಾರದ ಚಿಂತನೆಯಾಗಿದೆ ಎಂದು ಹೇಳಿದ್ದಾರೆ.
ಉದ್ಯೋಗ ಮೇಳ ಮೂಲಕ ನಮ್ಮ ಭಾಗದ ಯುವಕರಿಗೆ ಉದ್ಯೋಗ ಸಿಗುವಂತೆ ಮಾಡುತ್ತಿದ್ದೇವೆ. ನಾನು ಜಿಲ್ಲೆಗೆ ಹೋದಾಗಲೆಲ್ಲಾ ಕೆಲಸ ಕೊಡಿಸಿ ಎಂದು ಯುವಕರು ಅರ್ಜಿ ನೀಡುತ್ತಿದ್ದರು. ನಮಗೆ ಅರ್ಜಿ ಕೊಟ್ಟವರನ್ನು ಕರೆಸುತ್ತಿದ್ದೇವೆ. ಎಷ್ಟು ಜನರಿಗೆ ಉದ್ಯೋಗ ಸಿಗುತ್ತೋ ಸಿಗಲಿ. ನಾವು ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದೇವೆ ಎಂದು ಹೇಳಿದ್ದಾರೆ.
ಶನಿವಾರ ರಾಜ್ಯಪಾಲರು (Governor) ಭೇಟಿ ಮಾಡಲು ನಮಗೆ ಅವಕಾಶ ನೀಡಿದ್ದಾರೆ. ಇತ್ತೀಚೆಗೆ ನಡೆದ ನಿಶ್ಚಿತಾರ್ಥ (Engagement) ಕಾರ್ಯಕ್ರಮವೊಂದರಲ್ಲಿ ಅವರನ್ನು ಭೇಟಿ ಮಾಡಿದ್ದೆ. ಅವರು ಭೇಟಿಗೆ ಕಾಲಾವಕಾಶ ನೀಡಿದ್ದು, ನಾವು ನಮ್ಮ ಮನವಿ ಸಲ್ಲಿಸುತ್ತೇವೆ ಎಂದು ಈ ಸಂದರ್ಭದಲ್ಲಿ ಹೇಳಿದ್ದಾರೆ.








