ಬೆಂಗಳೂರು: ನಾನು ಕಾನೂನಿಗೆ ಗೌರವ ಕೊಡುತ್ತೇನೆ. ಎಲ್ಲಿಯೂ ಓಡಿ ಹೋಗುವುದಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಮಧ್ಯಂತರ ಆದೇಶ ತಡೆ ಕೋರಿ ಸಿಬಿಐ ಸಲ್ಲಿಸಿದ್ದ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ (Supreme Court) ಶಿವಕುಮಾರ್ ಗೆ ನೋಟಿಸ್ ನೀಡಿತ್ತು. ಈ ವಿಚಾರವಾಗಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಯಾವ ಸಂದರ್ಭದಲ್ಲಿ ಯಾರಿಗೆ ಉತ್ತರ ಕೊಡಬೇಕೋ ಹಾಗೆ ಕೊಡುತ್ತೇನೆ ಎಂದು ಹೇಳಿದ್ದಾರೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನಿವಾಸದಲ್ಲಿ ವೇಣುಗೋಪಾಲ್ ಜೊತೆ ಸಭೆ ನಡೆಸಿದ ಕುರಿತು ಪ್ರತಿಕ್ರಿಯಿಸಿದ ಅವರು, ಇದು ಪಕ್ಷದ ಆಂತರಿಕ ವಿಚಾರ. ಲೋಕಸಭೆ ಚುನಾವಣೆ ಸೀಟು ಹಂಚಿಕೆ ಬಗ್ಗೆ ಚರ್ಚೆ ನಡೆಯಿತು. ನಿಗಮ ಮಂಡಳಿ ನೇಮಕಕ್ಕೆ ವೇಗ ನೀಡುವ ಕುರಿತು ಚರ್ಚೆ ಆಯಿತು ಎಂದು ಹೇಳಿದ್ದಾರೆ.